ಚಿಕ್ಕಮಗಳೂರು: ಮುಂಗಾರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೆಳೆಗಾರರ ಹಿತರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಲದಗದ್ದೆ ಗಿರೀಶ್ ಆಗ್ರಹಿಸಿದ್ದಾರೆ.
ಜಿಲ್ಲೆಯ ಬಯಲು ಹಾಗೂ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಇದೀಗ ಮುಂಗಾರು ಸಹ ಆರಂಭವಾಗಿದೆ. ರೈತರು ಭೂಮಿ ಹದ ಮಾಡಿಕೊಂಡು ಬಿತ್ತನೆಗೆ ಚಟುವಟಿಕೆ ಆರಂಭಿಸಲು ಕಾಯುತ್ತಿದ್ದಾರೆ. ಈ ಹಂತದಲ್ಲಿ ರೈತರಿಗೆ ಅಗತ್ಯವಿರುವ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೃಷಿ, ತೋಟಗಾರಿಕೆ ಸಲಕರಣೆಗಳನ್ನು ಯಾವುದೇ ತೊಡಕುಗಳಿಗೆ ಅವಕಾಶವಿಲ್ಲದಂತೆ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಕೆಲವು ಮಾರಾಟಗಾರರು ರಸಗೊಬ್ಬರದ ತೂಕದಲ್ಲಿ ಮೋಸ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ, ಕೀಟನಾಶಕಗಳು, ಇನ್ನಿತರರೆ ಕೃಷಿ, ತೋಟಗಾರಿಕೆ ಸಾಮಾಗ್ರಿಗಳು ಕಳಪೆಯಾಗಿರುವ ಬಗ್ಗೆಯೂ ಆಕ್ಷೇಪಗಳು ಇರುವ ಹಿನ್ನೆಲೆಯಲ್ಲಿ ಅಂತಹವರಿಗೆ ಕಡಿವಾಣ ಹಾಕಬೇಕು, ಕೆಲವು ಮಾರಾಟಗಾರರು ಗೊಬ್ಬರಕ್ಕೆ ನಿಗಧಿತ ಬೆಲೆಗಿಂತಲೂ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿದ್ದಾರೆ. ಅಮಾಯಕ ರೈತರಿಗೆ ಇದರಿಂದ ಅನ್ಯಾಯವಾಗುತ್ತಿದೆ. ಅಂತಹವನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.
ಪಕ್ಕದ ಜಿಲ್ಲೆ ಹಾಸನದ ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟದ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟ ಮಾಡಿದ ಪರಿಣಾಮ ನೆಲದಲ್ಲೇ ಕೊಳೆತುಹೋಗಿರುವ ಹಿನ್ನೆಲೆಯಲ್ಲಿ ರೈತರು ಟ್ರ್ಯಾಕ್ಟರ್ ಹಾಯಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮೊನ್ನೆಯಷ್ಟೇ ನಡೆದಿದೆ. ಇದನ್ನು ಗಮನದಲ್ಲಿರಿಸಿಕೊಂಡು ಗುಣ ಮಟ್ಟದ ಬಿತ್ತನೆ ಬೀಜ ಪೂರೈಕೆಯತ್ತ ನಿಗಾ ವಹಿಸಬೇಕು ಅಲ್ಲದೆ, ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರದ ಜೊತೆಗೆ ಕಳಪೆ ಬೀಜ ಮಾರಾಟ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಒಂದೆಡೆ ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಂಡು ಕಾಯುತ್ತಿದ್ದಾರೆ. ಮತ್ತೊಂದೆಡೆ ಮುಂಗಾರು ಕಣ್ಣಾಮುಚ್ಚಾಲೆ ಆಡುತ್ತಿದೆ. ಕೃಷಿಕರು ಇದರಿಂದ ಆತಂಕಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡುವ ಜೊತೆಗೆ ರೈತರಿಗೆ ನೈತಿಕ ಸ್ಥೈರ್ಯ ತುಂಬಬೇಕು ಎಂದು ಒತ್ತಾಯಿಸಿದ್ದಾರೆ.
District administration should take necessary action for supply of fertilizers