ಚಿಕ್ಕಮಗಳೂರು: ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯ, ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಬಾಲ್ಯ ವಿವಾಹ ಸಮನ್ವಯ ಮತ್ತು ಪರಿಶೀಲನಾ ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ತಡೆ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೌಟುಂಬಿಕ ದೌರ್ಜನ್ಯದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಮಹಿಳೆಯರಿಗೆ ಇರುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು ಎಂದ ಅವರು ಕೌಟುಂಬಿಕ ಹಿಂಸೆಯಿಂದ ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿ ಕೊಡಲು ಕ್ರಮವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳು ನಡೆಯದಂತೆ ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಿ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಬೇಕು. ಬಾಲ್ಯ ವಿವಾಹ ನಿಯಂತ್ರಣ ಕಾಯ್ದೆ ಬಳಸಿಕೊಂಡು ಬಾಲ್ಯ ವಿವಾಹಕ್ಕೆ ಪ್ರೋತ್ಸಾಹಿಸುವವರಿಗೆ ತಕ್ಕ ಶಿಕ್ಷೆಯಾಗುವಂತೆ ಅಧಿಕಾರಿಗಳು ಕಾಳಜಿ ವಹಿಸಬೇಕಲ್ಲದೆ, ಬಾಲ್ಯ ವಿವಾಹ ತಡೆಯುವ ಕುರಿತಂತೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ೨೩ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ಈ ೨೩ ಮಕ್ಕಳನ್ನು ಪೋಷಕರ ವಶಕ್ಕೆ ನೀಡಲಾಗಿದೆ. ಬಾಲ್ಯ ವಿವಾಹ ನಡೆದ ೨ ಪ್ರಕರಣದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ತನಿಖೆ ಹಂತದಲ್ಲಿದೆ. ಗ್ರಾಮ ಪಂಚಾಯಿತಿಗಳಲ್ಲಿ ಮಕ್ಕಳ ವಿಶೇಷ ಗ್ರಾಮಸಭೆಗಳಲ್ಲಿ ಬಾಲ್ಯವಿವಾಹ ಮತ್ತು ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು
ಎಲ್ಲಾ ಪುರೋಹಿತ, ಅರ್ಚಕರು ಹಾಗೂ ಕಲ್ಯಾಣ ಮಂಟಪಗಳಲ್ಲಿ ವಧು, ವರರ ವಯಸ್ಸನ್ನು ಖಾತ್ರಿ ಪಡಿಸಿಕೊಂಡ ನಂತರವೆ ಕಲ್ಯಾಣ ಮಂಟಪ ನೀಡುವ ಕುರಿತು ಜಿಲ್ಲಾಧಿಕಾರಿಗಳಿಂದ ವಿಶೇಷ ಸೂಚನಾ ಪತ್ರವನ್ನು ಹೊರಡಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆಯಲ್ಲದೆ. ಬಾಲ್ಯ ವಿವಾಹ ತಡೆಯುವ ಸಂಬಂಧ ಮಕ್ಕಳ ಸಹಾಯವಾಣಿ ೧೦೯೮ ಕಾರ್ಯ ನಿರ್ವಹಿಸುತ್ತಿದೆ ಹಾಗೂ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಾಲ್ಯ ವಿವಾಹ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಏಪ್ರಿಲ್ ೨೦೨೩ ರಿಂದ ಜೂನ್ ೨೦೨೩ರ ಅಂತ್ಯದವರೆಗೆ ೨೫ ಪ್ರಕರಣಗಳು ದಾಖಲಾಗಿದ್ದು, ಡಿ.ಐ.ಆರ್. ನ್ಯಾಯಾಲಕ್ಕೆ ೧೦ ಪ್ರಕರಣಗಳು ಸಲ್ಲಿಕೆಯಾಗಿವೆ. ೯ ಪ್ರಕರಣಗಳು ಸಮಾಲೋಚನೆಯಿಂದ ಇತ್ಯರ್ಥವಾಗಿದ್ದು, ೬ ಪ್ರಕರಣಗಳು ಬಾಕಿ ಇವೆ ಎಂದು ಸಭೆಗೆ ಮಾಹಿತಿ ನೀಡಿದರು.
ಕಾಫಿ ತೋಟಗಳಿಗೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಕೆಲಸಕ್ಕೆ ಬರುವ ಕಾರ್ಮಿಕರ ಮಾಹಿತಿಯನ್ನು ಕಾರ್ಮಿಕ ಇಲಾಖೆ ಮಾಹಿತಿ ಸಂಗ್ರಹಿಸಬೇಕಲ್ಲದೆ. ಈ ಕಾಯ್ದೆಗಳ ಕುರಿತು ಅವರಲ್ಲಿ ಅರಿವು ಮೂಡಿಸುವಂತೆ ಸೂಚಿಸಿದರು. ಸಭೆಯಲ್ಲಿ ಜಿ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Awareness is necessary to prevent violence against women