ಚಿಕ್ಕಮಗಳೂರು: ಮಳೆ ಕೊರತೆ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇರುವಲ್ಲಿ ಕೊಳವೆ ಬಾಗಿ ಕೊರೆಸುವ ಅಗತ್ಯ ಕಂಡುಬಂದರೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಬೆಳೆದ ಮೇವು ಹೊರ ಜಿಲ್ಲೆಗಳಿಗೆ ಹೋಗದಂತೆ ಕ್ರಮ ಕೈಗೊಳ್ಳಬೇಕು ಎನ್ನುವ ಶಾಸಕರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲೆಗೆ ಅಗತ್ಯವಿರುವಷ್ಟು ಪ್ರಮಾಣದ ಮೇವನ್ನು ದಾಸ್ತಾನಿಟ್ಟುಕೊಳ್ಳಬೇಕು. ಮೇವಿನ ಕೊರತೆ ನೀಗಿಸುವ ನಿಟ್ಟಿನಲ್ಲಿ ಅಮೃತ್ ಮಹಲ್ ಕಾವಲಿನಲ್ಲಿ ಮೇವು ಬೆಳೆಯಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬರ ಪರಿಸ್ಥಿತಿ ನಿರ್ವಹಣೆ ಕುರಿತು ಬಹುತೇಕ ಎಲ್ಲಾ ಶಾಸಕರು ಒತ್ತಡ ಹೇರಿದರು. ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ ಮಲೆನಾಡು ಪ್ರದೇಶಗಳಲ್ಲೇ ಕೊಳವೆಬಾವಿಗಳು ವಿಫಲವಾಗುತ್ತಿವೆ. ಹೊಸದಾಗಿ ಕೊಳವೆಬಾವಿ ಕೊರೆಸಲು ಅನುಮತಿ ನೀಡಬೇಕು. ಈಗಾಗಲೇ ನಮ್ಮ ಕ್ಷೇತ್ರದಲ್ಲಿ ಎರಡು ಟ್ಯಾಂಕರ್ಗಳಲ್ಲಿ ನೀರು ಪೂರೈಸುವ ಸ್ಥಿತಿ ಇದೆ ಎಂದು ತಿಳಿಸಿದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಚಿಕ್ಕಮಗಳೂರು ತಾಲ್ಲೂಕಿನ ಲಕ್ಯಾ, ಅಂಬಳೆ ಹೋಬಳಿಗಳಲ್ಲಿ ಈಗಲೇ ನೀರಿನ ಸಮಸ್ಯೆ ಎದುರಾಗಿದೆ. ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹೊಸದಾಗಿ ಕೊಳವೆಬಾವಿ ಕೊರೆಸಲು ಅನುಮತಿ ನೀಡುತ್ತಿಲ್ಲ ಎಂದು ಗ್ರಾ.ಪಂ.ನವರು ಪರಿಶೀಲನಾ ವರದಿ ನೀಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಏಕೆ ಎಂದು ಶಾಸಕ ನಯನ ಮೋಟಮ್ಮ ಪ್ರಶ್ನಿಸಿದರು.
ಈ ಕುರಿತು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಉತ್ತರಿಸಿ, ತರೀಕೆರೆಯಲ್ಲಿ ೩೬ ಗ್ರಾಮಗಳಲ್ಲಿ ಹಾಗೂ ಅಜ್ಜಂಪುರದಲ್ಲಿ ೨೬ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರದ ನಿರ್ದೇಶನದಂತೆ ಹೊಸ ಕೊಳವೆಬಾವಿ ಕೊರೆ ಸಲು ಅನುಮತಿಯಿಲ್ಲ ಎಂದು ತಿಳಿಸಿದರು.
ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಖಾಸಗಿ ಕೊಳವೆ ಬಾವಿಯವರು ಕುಡಿಯುವ ನೀರು ನೀಡಲು ಒಪ್ಪುತ್ತಿಲ್ಲ. ಹೊಸದಾಗಿ ಕೊಳವೆಬಾವಿಗಳನ್ನು ಕೊರೆಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿದರು.
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುಟುಂಬಗಳ ಸ್ಥಳಾಂತರಕ್ಕೆ ಮನವೊಲಿಸಲಾಗಿದೆ. ಆದರೆ, ಅವರಿಗೆ ಪರಿಹಾರ ವಿತರಣೆ ಸಂಬಂಧ ದರ ನಿಗಧಿ ಸಂದರ್ಭದಲ್ಲಿ ಅರಣ್ಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಶಾಸಕರು ದೂರಿದರು.
ಶಾಸಕ ಕೆ.ಎಸ್.ಆನಂದ್ ಶಿಕ್ಷಣ ಇಲಾಕೆ ಕಾರ್ಯವೈಖರಿಯನ್ನು ಖಂಡಿಸಿದರು. ಇಲಾಖೆಯನ್ನು ಸರಿಪಡಿಸಬೇಕಿದೆ. ಅಧಿಕಾರಿಗಳು, ಸಿಬ್ಬಂದಿಗಳು ಬ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಇದು ನಾಚಿಕೆಗೇಡು. ಹಣ ಮಾಡಲು ಮಾತ್ರ ಬಂದಂತಿದೆ. ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಕಡೂರು, ಅಜ್ಜಂಪುರ ಸೇರಿದಂತೆ ಇತರೆಡೆಗಳಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕುಡಿಯುವ ನೀರಿಗೆ ಅನುದಾನ ಒದಗಿಸಲಾಗಿದೆ. ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ತರ್ತು ಸಂದರ್ಭಕ್ಕೆಂದೇ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಬಿ.ಗೋಪಾಲಕೃಷ್ಣ ಇತರರು ಇದ್ದರು.
District Level Quarterly Progress Review Meeting