ಚಿಕ್ಕಮಗಳೂರು: ಅತಿವೃಷ್ಟಿ, ಪ್ರವಾಹ, ಸುನಾಮಿ ಅಂತಹ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಕುರಿತು ಜಿಲ್ಲೆಯ ತಾಲ್ಲೂಕುಗಳಲ್ಲಿ ಎನ್ಡಿಆರ್ಎಫ್ ತಂಡ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.
ಅಂಬಳೆ ಕೈಗಾರಿಕಾ ಪ್ರದೇಶದಲ್ಲಿರುವ ಲೈಫ್ ಲೈನ್ ಫೀಡ್ಸ್ನ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಶ್ರಯದಲ್ಲಿ ಜನವರಿ ೨೬ರ ವರೆಗೆ ಜಿಲ್ಲೆಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್.ಡಿ.ಆರ್.ಎಫ್) ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚಿಕ್ಕಮಗಳೂರು ಜಿಲ್ಲೆಯು ಹಲವಾರು ವರ್ಷಗಳಿಂದ ಭೂಕುಸಿತ, ಪ್ರವಾಹ ಮತ್ತು ಬರಗಾಲ ಸೇರಿದಂತೆ ಅನೇಕ ಪ್ರಾಕೃತಿಕ ದುರಂತಗಳನ್ನು ಎದುರಿಸಿಕೊಂಡು ಬಂದಿದೆ. ೨೦೧೯ನೇ ಸಾಲಿನಲ್ಲಿ ಉಂಟಾದ ಭೂಕುಸಿತ, ಪ್ರವಾಹ ಪರಿಸ್ಥಿತಿಯನ್ನು ಪ್ರಸ್ತಾಪಿಸಿದ ಅವರು ಈ ಸಂದರ್ಭದಲ್ಲಿ ಜಿಲ್ಲಾಡಳಿತವು ಕೈಗೊಂಡ ಕಾರ್ಯವನ್ನು ಶ್ಲಾಘಿಸಿದ ಅವರು ಈ ಒಂದು ಕಾರ್ಯಾಗಾರ ಎಷ್ಟು ಮಹತ್ವವಾದದ್ದು ಎಂಬುದರ ಬಗ್ಗೆ ತಿಳಿಸಿದ ಅವರು ಜಿಲ್ಲೆಯ ಸಾರ್ವಜನಿಕರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ ಚಿಕ್ಕಮಗಳೂರು ಮೂಡಿಗೆರೆ, ಕಳಸ, ಶೃಂಗೇರಿ ಹಾಗೂ ಕೊಪ್ಪ ತಾಲ್ಲೂಕಿನಲ್ಲಿ ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಜನವರಿ ೨೬ ರಂದು ಚಿಕ್ಕಮಗಳೂರು ತಾಲ್ಲೂಕಿನಲ್ಲಿ ಕಾರ್ಯಾಗಾರ ಮುಕ್ತಾಯವಾಗಲಿದೆ. ಎಲ್ಲರೂ ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.
ಎನ್ ಡಿ ಆರ್ ಎಫ್ ತಂಡದ ಇನ್ಸ್ಪೆಕ್ಟರ್ ಅಜಯ್ ಕುಮಾರ್ ಮಾತನಾಡಿ ಸಮುದಾಯದಲ್ಲಿ ವಿವಿಧ ಅವಘಡಗಳು ಸಂಭವಿಸಿದಾಗ ಪ್ರಥಮ ಹಂತದಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಕುರಿತು ಆಂಧ್ರಪ್ರದೇಶದ ವಿಜಯವಾಡದ ೧೦ನೇ ಬೆಟಾಲಿಯನ್ ಎನ್ ಡಿ ಆರ್ ಎಫ್ ತಂಡದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅರಿವು ಮೂಡಿಸಲಾಗುತ್ತಿದೆ. ಶಾಲೆ-ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದರು.
ಬಹು ಮಹಡಿಗಳ ಕಟ್ಟಡಗಳಲ್ಲಿ ಅವಘಡಗಳು ಸಂಭವಿಸಿದಾಗ ಹಾಗೂ ಪ್ರಕೃತಿ ವಿಕೋಪಗಳು ಉಂಟಾದಾಗ ಸ್ಥಳೀಯವಾಗಿ ಸಿಗುವ ವಸ್ತುಗಳನ್ನು ಬಳಸಿಕೊಂಡು ಪ್ರವಾಹದಿಂದ ದಡ ಸೇರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.
ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ತಾಲ್ಲೂಕು ತಹಶೀಲ್ದಾರ್ ಡಾ. ಸುಮಂತ್, ಲೈಫ್ ಲೈನ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕಿಶೋರ್ ಕುಮಾರ್, ಪೊಲೀಸ್ ಇಲಾಖೆ, ಅಗ್ನಿ ಶಾಮಕ ಠಾಣೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ ಹಾಗೂ ಲೈಫ್ ಲೈನ್ ಸಂಸ್ಥೆಯ ಸಿಬ್ಬಂದಿಗಳು ಕಾರ್ಯಾಗಾರದಲ್ಲಿ ಹಾಜರಿದ್ದರು.
National Disaster Management Force (NDRF) workshop