ಚಿಕ್ಕಮಗಳೂರು: ಕಳೆದ ಚುನಾವಣೆಯಲ್ಲಿ ಅತಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಿ ವಿಭಾಗವಾರು ಆಯ್ಕೆ ಮಾಡಿಕೊಂಡು ಸ್ವೀಪ್ ಸಮಿತಿ ವತಿಯಿಂದ ಕ್ರಿಯಾತ್ಮಕ ಚಟುವಟಿಕೆಗಳನ್ನು ಕೈಗೊಂಡು ೨೦೨೪ರ ಲೋಕ ಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸ್ವೀಪ್ ಕಾರ್ಯ ಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶೇಷ ಚೇತನರು, ದುರ್ಬಲ ವರ್ಗದ ಮತದಾರರನ್ನು ವಿಶೇಷ ಆಸಕ್ತಿ ವಹಿಸಿ ಸ್ವೀಪ್ ಚಟುವಟಿಕೆ ಕೈಗೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಮತದಾನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮತದಾನ ಪ್ರಮಾಣ ಹೆಚ್ಚಿಸಲು ಮುಂಚಿತವಾಗಿಯೇ ಕ್ರಿಯಾಯೋಜನೆ ರೂಪಿಸಿ, ಜಾಗೃತಿ ಮೂಡಿಸಬೇಕು ಎಂದ ಅವರು ವಿದ್ಯಾರ್ಥಿಗಳಲ್ಲಿ ಚುನಾವಣೆ ಮತ್ತು ಮತದಾನ ಕುರಿತು ಅರಿವು ಮೂಡಿಸಲು ವಿವಿಧ ಶಾಲಾ, ಕಾಲೇಜುಗಳಲ್ಲಿ ಸ್ವೀಪ್ ಸಮಿತಿ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ರಾಷ್ಟ್ರೀಯ ಮತದಾನ ದಿನದ ಅಂಗವಾಗಿ ವಿವಿಧ ಪ್ರಬಂಧ ಸ್ಪರ್ಧೆ, ಅಣಕು ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಮುಂಬರುವ ಚುನಾವಣೆಗೆ ಶೇ ೮೫ ಕ್ಕೂ ಹೆಚ್ಚು ಗುರಿ ಸಾಧಿಸಬೇಕು. ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯಗಳ ಕುರಿತು ಮತದಾರರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದರು.
ವಿದ್ಯುನ್ಮಾನ ಮತಯಂತ್ರ (ಇವಿಎಂ) ಕುರಿತು ಬಹಳಷ್ಟು ಜನರಿಗೆ ಗೊಂದಲವಿರುತ್ತದೆ. ಈ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅವರ ಗೊಂದಲ ಬಗೆಹರಿಸಿ ಮತಯಂತ್ರಗಳ ಕಾರ್ಯ ವೈಖರಿ ಕುರಿತು ವಿವರಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಮುಖ ಘಟ್ಟವಾಗಿರುವ ಚುನಾವಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತೆ ಪ್ರೇರಿಪಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ. ಗೋಪಾಲಕೃಷ್ಣ ಬಿ. ಮಾತನಾಡಿ ಜಿಲ್ಲೆಯಲ್ಲಿ ಮತದಾನ ಕಡಿಮೆ ಇರುವ ೨೭ ಮತಗಟ್ಟೆಗಳನ್ನು ಗುರುತಿಸಿ ಈ ಮತಗಟ್ಟೆಗಳಿಗೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಕಳೆದ ೨೦೨೩ರ ವಿಧಾನ ಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಕಡಿಮೆಯಾಗಲು ಕಾರಣಗಳನ್ನು ಗುರುತಿಸಿ. ಮುಂದೆ ಮತದಾನದ ಪ್ರಮಾಣ ಹೆಚ್ಚಿಸಲು ಮತದಾರರಲ್ಲಿ ಅರಿವು ಮೂಡಿಸಲು ಸ್ವೀಪ್ ಸಮಿತಿ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲಾಗುತ್ತಿದೆಯಲ್ಲದೆ ೧೮ ವರ್ಷ ತುಂಬಿದ ಪ್ರತಿಯೊಬ್ಬ ಅರ್ಹರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯ್ಕ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಾಗರತ್ನ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Review meeting of sweep work activities held at Zilla Panchayat hall