ಚಿಕ್ಕಮಗಳೂರು: ರಂಟಿ ಫಲಾನುಭವಿಗಳ ಜಿಲ್ಲಾಮಟ್ಟದ ಸಮಾವೇಶವನ್ನು ಮಾರ್ಚ್ 3ರಂದು ನಗರದ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 1 ಗಂಟೆಗೆ ಆರಂಭಗೊಳ್ಳಲಿರುವ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ವಿವಿಧ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಮಾವೇಶದಲ್ಲಿ 15 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆಯಿದ್ದು, ಐದು ಗ್ಯಾರಂಟಿಗಳ ಕೆಲ ಫಲಾನುಭವಿಗಳು ತಮ್ಮ ಅನಿಸಿಕೆ ಹಂಚಿಕೊಳ್ಳಲಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಂದ ಫಲಾನುಭವಿಗಳನ್ನು ಕರೆತರಲು 300 ಬಸ್ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ವಿವರಿಸಿದರು.
ಗ್ಯಾರಂಟಿ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ ಕೆಲ ಕಾಮಗಾರಿಗಳ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ಜಿಪಂ ಸಿಇಒ ಡಾ.ಗೋಪಾಲಕೃಷ್ಣ ಮಾತನಾಡಿ, ಸಿಎಂ ಕಚೇರಿಯಿಂದ ಮಾರ್ಚ್ 3ರಂದು ಮಧ್ಯಾಹ್ನ ಒಂದರಿಂದ ಮೂರು ಗಂಟೆವರೆಗೆ ಗ್ಯಾರೆಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸುವಂತೆ ಸೂಚನೆ ಬಂದಿದೆ ಅದರಂತೆ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಫಲಾನುಭವಿಗಳನ್ನು ಕರೆತರಲು ಆಯಾ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಫಲಾನುಭವಿಗಳಿಗೆ ಬೇಕಾದ ಸೌಲಭ್ಯ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಸಮಾವೇಶದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು 475 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಇದಲ್ಲದೆ ಎರಡು ಇಂದಿರಾ ಕ್ಯಾಂಟೀನ್ ಕಾಮಗಾರಿಗು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
Meeting of Guarantee Beneficiaries Mon. At 3