ಚಿಕ್ಕಮಗಳೂರು: ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ, ಎಲ್ಲರೂ ಮತದಾನದಲ್ಲಿ ಖುಷಿಯಿಂದ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಗೋಪಾಲಕೃಷ್ಣ ಬಿ. ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಕೈಗಾರಿಕಾ ಇಲಾಖೆ, ಕಾರ್ಮಿಕ ಇಲಾಖೆ ವತಿಯಿಂದ ಅಂಬಳೆ ಕೈಗಾರಿಕಾ ಕೇಂದ್ರದ ಲೈಫ್ ಲೈನ್ ಪೀಡ್ಸ್ ಸಂಸ್ಥೆಯ ಕೈಗಾರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಏಪ್ರಿಲ್ ೨೬ ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಸದೃಢ ದೇಶ ಕಟ್ಟಲು ಶೇ ೧೦೦ ರಷ್ಟು ಮತದಾನ ಆಗಬೇಕು. ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು, ಯಾವುದೇ ಆಸೆ ಆಮಿಷಕ್ಕೆ ಬಲಿಯಾಗದೇ ಮತದಾನ ಮಾಡಬೇಕು ಎಂದ ಅವರು. ಇದರಿಂದ ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೇಳಿದರು.
ಕಾರ್ಮಿಕರಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ವಾಣಿಜ್ಯ ಕೈಗಾರಿಕೆ ಇಲಾಖೆ ಉಪ ನಿರ್ದೇಶಕ ರವಿ ಪ್ರಸಾದ್ ಎಲ್ಲರನ್ನು ಸ್ವಾಗತಿಸಿದರು.
ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಉಮೇಶ್, ಕೈಗಾರಿಕೆ ಇಲಾಖೆ ಸಹಾಯದ ನಿರ್ದೇಶಕ ಚಂದ್ರಶೇಖರ್ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ದರಾಜು, ಕಾರ್ಮಿಕ ಅಧಿಕಾರಿ ರವಿಕುಮಾರ್, ಆಯುಷ್ ಅಧಿಕಾರಿ ಗೀತಾ, ಲೈಫ್ ಲೈನ್ ಪೀಡ್ಸ್ ಸಂಸ್ಥೆಯ ಎ.ಜಿ.ಎಂ. ದಿನೇಶ್ ಮುಂತಾದವರು ಉಪಸ್ಥಿತರಿದ್ದರು.
Voting awareness program organized for workers