ಚಿಕ್ಕಮಗಳೂರು: ಬಾಲಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕವಾಗಿದ್ದು, ಅಂಥ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿದಾಗಲೇ ಪರಿಹಾರ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ತಿಳಿಸಿದರು.
ನಗರದ ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆಯ ರೋಟರಿ ಎಂ.ಎಲ್. ವಾಸುದೇವ ಮೂರ್ತಿ ಕಮ್ಯೂನಿಟಿ ಹಾಲ್ನಲ್ಲಿ ಬುಧವಾರ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲೆಂದೇ ಸರ್ಕಾರವು ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿದೆ. ಪರಿಣಾಮಕಾರಿ ಕಾನೂನುಗಳನ್ನು ರಚಿಸಿದೆ. ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವೆಂದು ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದ ಅವರು ಸರ್ಕಾರವಲ್ಲದೇ ಸರ್ಕಾರೇತರ ಸಂಘ ಸಂಸ್ಥೆಗಳು ಜೊತೆಗೂಡಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಮಾತನಾಡಿ ೬ ವರ್ಷದ ಪ್ರತಿ ಮಕ್ಕಳನ್ನು ಶಾಲೆಗೆ ಸೇರಿಸಿ ಅವರಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಪ್ರಜ್ಞಾವಂತ ನಾಗರೀಕರನ್ನಾಗಿ ಮಾಡುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ. ಜಿಲ್ಲೆಯಲ್ಲಿ ಕಳೆದ ವರ್ಷ ೧೮ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ಗುರುತಿಸಿ ಕ್ರಮಕೈಗೊಳ್ಳಲಾಗಿದೆ. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವುದು.
ಕೇವಲ ಸರ್ಕಾರ, ಸಂಘ ಸಂಸ್ಥೆಗಳಿಂದ ಮಾತ್ರವಲ್ಲ ಇದರ ನೈತಿಕ ಜವಾಬ್ದಾರಿಯನ್ನು ಎಲ್ಲರೂ ಹೊರಬೇಕು. ಸರ್ಕಾರ ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಉಚಿತ ಶಿಕ್ಷಣವನ್ನು ನೀಡುತ್ತಿದೆ. ಇದರ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ ನಾಗರೀಕರು ತಮ್ಮ ಮಕ್ಕಳನ್ನು ಸಮಾಜದ ಸತ್ಪ್ರಜೆಗಳನ್ನಾಗಿ ಮಾಡಬೇಕು ಎಂದ ಅವರು. ಕಾರ್ಯಕ್ರಮದಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ತಡೆಯಲು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ ಸಮಾಜದಲ್ಲಿ ಬಾಲಕಾರ್ಮಿಕರು, ಕಿಶೋರ ಕಾರ್ಮಿಕರು ಕಂಡು ಬಂದಲ್ಲಿ ಅವರ ರಕ್ಷಣೆಗೆ ಮುಂದಾಗಬೇಕು. ಮಕ್ಕಳನ್ನು ಕೆಲಸಕ್ಕೆ ತೊಡಗಿಸಿಕೊಂಡವರು ಮತ್ತು ಮಕ್ಕಳ ಪೋಷಕರಿಗೆ ಅಗತ್ಯ ತಿಳುವಳಿಕೆ ನೀಡಿ ಮಕ್ಕಳನ್ನು ರಕ್ಷಿಸ ಬೇಕು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಮೊದಲು ತಾಲ್ಲೂಕು ಪಂಚಾಯಿತಿ ಆವರಣದಿಂದ ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆಯವರೆಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶುಭಗೌಡರ್ ಹಸಿರು ನಿಶಾನೆ ತೋರಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ ಕೆ.ಎಸ್., ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಹಾಯಕ ಕಾರ್ಮಿಕ ಆಯುಕ್ತರಾದ ಕೆ.ಎಲ್. ರವಿಕುಮಾರ್, ವಕೀಲರ ಸಂಘ ಅಧ್ಯಕ್ಷ ಡಿ.ಬಿ. ಸುಜೇಂದ್ರ, ಟೌನ್ ಮಹಿಳಾ ಸಮಾಜ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಗೀತಾ ಎಲ್.ಎಮ್. ಮೂರ್ತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತರು ಹಾಜರಿದ್ದರು.
Education is the solution to eradicating child labour