ಚಿಕ್ಕಮಗಳೂರು: ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರದಿಂದ ಜಿಲ್ಲೆಗೆ ಬರುವ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ವಿಫಲವಾಗಿದ್ದು, ಈ ನಿರ್ಧಾರದಿಂದ ಜಿಲ್ಲೆಗೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಕಸ್ತೂರಿ ರಂಗನ್ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್. ವಿಜಯ್ಕುಮಾರ್ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು, ಈಗ ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿರುವುದರಿಂದ ಅನೇಕ ಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
ಪ್ರವಾಸಿ ತಾಣಗಳ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವಾಗ ಜಿಲ್ಲಾಡಳಿತ, ಸ್ಥಳೀಯರು, ಸ್ಥಳೀಯ ಸಂಘಸಂಸ್ಥೆಗಳು ಹೋರಾಟಗಾರರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಬೇಕು. ಆದರೆ ಜಿಲ್ಲಾಡಳಿತ ಕೆಲವೇ ಜನರ ಹಿತಾಸಕ್ತಿಗನುಗುಣವಾಗಿ ತೀರ್ಮಾನ ಕೈಗೊಳ್ಳುತ್ತಿರುವುದರಿಂದ ಪ್ರವಾಸಿಗರಿಗೆ ಅನಾನುಕೂಲವಾಗುವ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಹಿನ್ನೆಡೆಯಾಗಲಿದೆ ಎಂದು ಹೇಳಿದರು.
ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದನ್ನು ತಡೆಯುವ ಪ್ರಯತ್ನ ನಡೆಸುತ್ತಿದೆಯೇ ಹೊರತು ಪ್ರವಾಸಿಗರಿಗೆ ಅನುಕೂಲ ಕಲ್ಪಿಸಿ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದರಿಂದ ಸಂಚಾರ ವ್ಯವಸ್ಥೆ ತೀವ್ರವಾಗಿ ಹಾಳಾಗಿದ್ದು, ಟ್ರಾಫಿಕ್ ವ್ಯವಸ್ಥೆಯನ್ನು ಸರಿಪಡಿಸಬೇಕಾದ ಪೊಲೀಸರು ಕೇವಲ ದಂಡ ವಸೂಲಿಯಲ್ಲಿ ಹೆಚ್ಚಿನ ನಿಗಾ ವಹಿಸುತ್ತಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಇಂತಹ ನಿರ್ಧಾರಗಳ ಪರಿಣಾಮವಾಗಿ ಜಿಲ್ಲೆಯಲ್ಲಿರುವ ಹೋಂಸ್ಟೇಗಳು, ರೆಸಾರ್ಟ್ಗಳು, ಲಾಡ್ಜ್ಗಳು ದುಬಾರಿಯಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಮೂಡಿಗೆರೆ ತಾಲೂಕಿನ ಎತ್ತಿನ ಭುಜ ಪ್ರವಾಸಿ ತಾಣಕ್ಕೆ ನಿಷೇಧ ಹೇರಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಗಿರಿ ಪ್ರದೇಶಗಳಿಗೆ ಬರುತ್ತಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಲು ಕಾರಣವಾಗಿದೆ. ಇದನ್ನು ಸರಿಪಡಿಸಬೇಕಾದರೆ ಶಿವಮೊಗ್ಗ, ಬಾಳೇಹೊನ್ನೂರು ಕಡೆಗಳಿಂದ ಬರುವ ಪ್ರವಾಸಿಗರಿಗೆ ಪರ್ಯಾಯ ಮಾರ್ಗಗಳನ್ನು ವ್ಯವಸ್ಥೆ ಮಾಡಿದರೆ ಜನ ದಟ್ಟಣೆ ಹಾಗೂ ವಾಹನಗಳ ದಟ್ಟಣೆಗಳನ್ನು ಸರಿದೂಗಿಸಬಹುದಾಗಿದೆ ಎಂದು ಸಲಹೆ ನೀಡಿದರು.
ಜಿಲ್ಲೆಗೆ ಬರುವ ಪ್ರವಾಸಿಗರಿಂದ ಲಕ್ಷಾಂತರ ರೂ ಹಣ ಸಂಗ್ರಹಿಸಲಾಗುತ್ತಿದೆ. ಹಣದ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ರಹಸ್ಯವಾಗಿ ಖರ್ಚು ಮಾಡಲಾಗುತ್ತಿದೆ. ಪ್ರವಾಸಿಗರಿಂದ ಸಂಗ್ರಹವಾಗುವ ಲಕ್ಷಾಂತರ ರೂ ಮೊತ್ತದ ಹಣವನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳಾದ ಅತ್ತಿಗುಂಡಿ, ಹಿರೇಕೊಳಲೆ, ಅಲ್ಲಂಪುರ ಗ್ರಾಮ ಪಂಚಾಯಿತಿಗಳ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಗೆ ಬಳಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಸಂಚಾಲಕರುಗಳಾದ ಕೆ.ಕೆ ರಘು, ಶಾಂತಕುಮಾರ್, ಮಹಮದ್ಯೂಸೂಫ್,ಅತಾವುಲ್ಲಾಖಾನ್ಇದ್ದರು.
A bad name is given to the district by the unilateral decision of the district administration