ಚಿಕ್ಕಮಗಳೂರು: ಮುಡಾ ನಿವೇಶನ ಹಗರಣ ವಿರೋಧಿಸಿ ಪ್ರತಿಭಟನೆಗೆ ತೆರಳುತ್ತಿದ್ದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬಂಧಿಸಿದ ಕ್ರಮವನ್ನು ಖಂಡಿಸಿ ಇಂದು ಚಿಕ್ಕಮಗಳೂರಿನ ಆಜಾದ್ ಪಾರ್ಕ್ ನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಿಂದ ಘೋಷಣೆಗಳೊಂದಿಗೆ ಮೆರವಣಿಗೆಯಲ್ಲಿ ಆಜಾದ್ ಪಾರ್ಕಿಗೆ ಆಗಮಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದರು.
ರಾಜ್ಯ ಸರ್ಕಾರ ವಿರೋಧ ಪಕ್ಷಗಳ ಪ್ರತಿಭಟನೆ ಹತ್ತಿಕ್ಕುವ ಮೂಲಕ ತುರ್ತು ಪರಿಸ್ಥಿತಿ ನೆನಪಿಸುವಂತಿದೆ ಎಂದು ಪಕ್ಷದ ಮುಖಂಡರು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡು ರಾಜೀನಾಮೆಗೆ ಆಗ್ರಹಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಮಾತನಾಡಿ, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದರ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿದ್ದಾರೆ ಅದರ ಒಂದು ಭಾಗವೇ ಮುಡಾ ಹಗರಣ. ಈ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ ಅವರು ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಮಾತನಾಡಿ, ರಾಜ್ಯ ಸರ್ಕಾರ ಭ್ರಷ್ಟಾಚಾರದ ಕೋಪವಾಗಿದೆ. ವಿರೋಧ ಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ಯತ್ನ ನಡೆಸಿರುವ ರಾಜ್ಯ ಸರ್ಕಾರ ಪರೋಕ್ಷವಾಗಿ ತುರ್ತು ಪರಿಸ್ಥಿತಿಯನ್ನು ಹೇರಿರುವ ಹೇಡಿ ಸರ್ಕಾರ ಇದೆಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಚಿತ್ರದುರ್ಗ ಪ್ರಭಾರಿ ಸಿ.ಆರ್.ಪ್ರೇಮಕುಮಾರ್, ರಾಜ್ಯ ಬಿಜೆಪಿ ಒಬಿಸಿ ಕಾರ್ಯದರ್ಶಿ ಬಿ.ರಾಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ನರೇಂದ್ರ, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೀತಾರಾಮ್ ಭರಣ್ಯ, ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯಕುಮಾರ್, ನಗರ ಬಿಜೆಪಿ ಮಂಡಲ ಅಧ್ಯಕ್ಷ ಪುಷ್ಪರಾಜ್, ಪ್ರಧಾನ ಕಾರ್ಯದರ್ಶಿ ಕೌಶಿಕ್, ಜಿಲ್ಲಾ ಬಿಜೆಪಿ ಖಜಾಂಚಿ ನಾರಾಯಣಗೌಡ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತ ಅನಿಲಕುಮಾರ್, ಎಸ್ಸಿ ಮೋರ್ಚ ಜಿಲ್ಲಾ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಮಾಧ್ಯಮ ಸಹ ಪ್ರಮುಖ್ ಕೇಶವ ಮತ್ತಿತರರು ಭಾಗವಹಿಸಿದ್ದರು.
BJP protests in the city condemning the arrest of state president Vijayendra