ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಐದು ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿಯಲು ಆರಂಭಿಸಿದೆ. ಹೀಗಾಗಿ ಜುಲೈ 22 ರವರೆಗೆ ಸೀತಾಳಯ್ಯನ ಗಿರಿ ಹಾಗೂ ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಗಿರಿ ಪ್ರದೇಶದಲ್ಲಿ ಅತಿ ಹೆಚ್ಚು ಮಳೆ ಆಗುತ್ತಿರುವುದರಿಂದ ಅಲ್ಲಲ್ಲಿ ಗುಡ್ಡ ಕುಸಿಯುತ್ತಿದೆ. ಜೊತೆಗೆ ರಸ್ತೆಯ ಮೇಲ್ಮೈಗೆ ತೀವ್ರವಾದ ಹಾನಿಯಾಗಿದೆ. ಇಂಥ ರಸ್ತೆಯಲ್ಲಿ ವಾಹನಗಳ ಸಂಚಾರ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ವಾಹನ ಸಂಚಾರ ನಿರ್ಬಂಧಿಸಬೇಕು ಎಂದು ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದರು.
ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಮಳೆ ಕಡಿಮೆಯಾಗುವವರೆಗೆ ಅಂದರೆ ಜುಲೈ 22 ರವರೆಗೆ ಎಲ್ಲಾ ರೀತಿಯ ವಾಹನಗಳು ಗಿರಿ ಪ್ರದೇಶದಲ್ಲಿ ಸಂಚಾರ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಸ್ಥಳೀಯ ನಿವಾಸಿಗಳ ವಾಹನಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಿ ಆದೇಶಿಸಿದ್ದಾರೆ.
Holiday announcement for schools of 5 taluks