ಚಿಕ್ಕಮಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ೬೧,೭೦೦ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೆಗೌಡ ಹೇಳಿದರು.
ಬಾಬಾಬುಡನ್ ಗಿರಿಯ ಕವಿಕಲ್ಗಂಡಿಯಲ್ಲಿ ಭಾರಿ ಮಳೆಯಿಂದ ರಸ್ತೆ ಕುಸಿತವಾಗಿರುವುದನ್ನು ಇಂದು ವೀಕ್ಷಣೆ ಮಾಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಇದುವರೆವಿಗೂ ಉತ್ತರ ಕರ್ನಾಟಕ ಹಾಗೂ ರಾಜ್ಯದ ಅಲ್ಲಲ್ಲಿ ಬೆಳೆ ಹಾನಿಯಾಗಿರುವ ವರದಿ ಬಂದಿದ್ದು, ಮಲೆನಾಡು ಪ್ರದೇಶದಲ್ಲಿ ಬೆಳೆ ಹಾನಿ ಜೊತೆಗೆ ಗುಡ್ಡ ಕುಸಿತ ಉಂಟಾಗಿದೆ. ಹಾನಿಗೆ ಸಂಬಂಧಿಸಿದಂತೆ ತಕ್ಷಣ ಪರಿಹಾರ ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ. ಇನ್ನೂ ಬೆಳೆ ಹಾನಿ ಸಮೀಕ್ಷೆ ನಡೆಯುತ್ತಿದ್ದು, ಹಾನಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು
೨೦೧೯ ನೇ ಹಾಗೂ ೨೦೨೨ ನೇ ಸಾಲಿನಲ್ಲಿ ೧೨ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಆ ಸಂದರ್ಭದಲ್ಲಿ ೨೫೦ ಜನರ ಪ್ರಾಣ ಹಾನಿಯಾಗಿದ್ದು, ಈ ವರ್ಷ ೫೮ ಜನ ಇಲ್ಲಿಯವರೆಗೂ ಪ್ರವಾಹದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ. ದೊಡ್ಡ ಪ್ರವಾಹ ಕಂಡು ಬಂದಿಲ್ಲ. ಕೆಲವು ಸೀಮಿತ ಪ್ರದೇಶಗಳಲ್ಲಿ ಹಾನಿಯಾಗಿದೆ ಎಂದರು.
ಅಧಿವೇಶನ ಮುಗಿದ ತಕ್ಷಣ ಮುಖ್ಯಮಂತ್ರಿಗಳು, ನಾನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹದಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಿ ಜನರಿಗೆ ಆಗಿರುವ ಸಮಸ್ಯೆಗೆ ನೆರವು ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಲೆನಾಡು ಬಹುಕಾಲದಿಂದ ಹೆಚ್ಚು ಮಳೆ ಕಂಡಿರುವ ಪ್ರದೇಶವಾಗಿದೆ. ಇಲ್ಲಿ ಸ್ವಾಭಾವಿಕವಾಗಿ ಮಳೆ ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಹವಾಮಾನ ಬದಲಾವಣೆಯಿಂದಾಗಿ ಜೂನ್ ತಿಂಗಳಿನಿಂದ ಜುಲೈ ೧೦ರ ವರೆಗೆ ಮಳೆ ಕೊರತೆ ಕಾಣುತ್ತೇವೆ. ಜುಲೈ ೧೦ ರ ನಂತರ ಎರಡು ತಿಂಗಳಿಗಾಗುವಷ್ಟು ಮಳೆ ೨೦ ದಿನದಲ್ಲಿ ಸುರಿದಿದೆ.
ಹವಾಮಾನ ಬದಲಾವಣೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ. ಪರಿಸರದ ವಿಷಯದಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕು. ಇಷ್ಟ ಬಂದ ಹಾಗೇ ಗುಡ್ಡ ಕಡಿದು ರಸ್ತೆ ನಿರ್ಮಾಣ ಮಾಡುವುದರಿಂದ ಗುಡ್ಡ ಕುಸಿತದಂತಹ ಅವಘಡಗಳನ್ನು ಕಾಣುತ್ತಿದ್ದೇವೆ ಎಂದು ತಿಳಿಸಿದರು.
ಗುಡ್ಡ ಕುಸಿತದಂತಹ ಸಮಸ್ಯೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದಿಂದ ರಾಜ್ಯದಲ್ಲಿ ಎಲ್ಲೆಲ್ಲಿ ಗುಡ್ಡ ಕುಸಿತ ಸಾಧ್ಯತೆ ಹೆಚ್ಚು ಇದೆ. ಅಂತಹ ಕಡೆ ಈಗಾಗಲೇ ವೈಜ್ಞಾನಿಕ ಸರ್ವೆ ಮಾಡಿಸಿದ್ದು, ಅದರ ವರದಿ ಆಧಾರದ ಮೇಲೆ ಮಲೆನಾಡು ಭಾಗದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದೆ.
ಆ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಯಾವ ಜನವಸತಿ ಪ್ರದೇಶಗಳಲ್ಲಿ ಗುಡ್ಡ ಕುಸಿತದಿಂದ ತೊಂದರೆಯಾಗುವುದನ್ನು ಗುರುತಿಸಿ ವರದಿ ಕೊಡಲು ತಿಳಿಸಿದ್ದು, ಇನ್ನೂ ೧೦-೧೫ ದಿನಗಳಲ್ಲಿ ವರದಿ ತರಿಸಿಕೊಂಡು ಈ ವರ್ಷ ೧೦೦ ಕೋಟಿ, ಮುಂದಿನ ವರ್ಷ ೨೦೦ ಕೋಟಿ ಸೇರಿದಂತೆ ಒಟ್ಟು ೩೦೦ ಕೋಟಿ ಗುಡ್ಡ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲು ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳು ಒಪ್ಪಿದ್ದಾರೆ ಎಂದರು
ಈ ಅನುದಾನದಲ್ಲಿ ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ಅಕ್ಕಪಕ್ಕದ ಕರಾವಳಿ ಜಿಲ್ಲೆಗಳ ಗುಡ್ಡ ಕುಸಿತ ತಡೆಗಟ್ಟುವ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅತಿವೃಷ್ಟಿಯಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಕಾಮಗಾರಿಯನ್ನು ಶೀಘ್ರವಾಗಿ ಕೈಗೊಳ್ಳಲು ತಿಳಿಸಲಾಗಿದೆ. ಗುಡ್ಡ ಕುಸಿತದಿಂದ ಹಾನಿಯಾಗಿರುವ ರಸ್ತೆಗಳ ದುರಸ್ತಿ ಸಾಧ್ಯವಿಲ್ಲ. ಅವುಗಳ ಮರು ನಿರ್ಮಾಣವಾಗ ಬೇಕಾಗಿದೆ. ಮರು ನಿರ್ಮಾಣವಾಗ ಬೇಕಾಗಿರುವ ರಸ್ತೆಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಡಿ. ತಮ್ಮಯ್ಯ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಹೆಚ್. ಹರೀಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Crop damage in 61,700 hectares due to heavy rains in the state