ಚಿಕ್ಕಮಗಳೂರು: ಶೋಷಿತ ಸಮುದಾಯಗಳ ಜನನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಷಡ್ಯಂತ್ರ ರೂಪಿಸುತ್ತಿರುವ ಬಿಜೆಪಿ-ಜೆಡಿಎಸ್ ಅಧ್ಯಕ್ಷರ ಗೃಹ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ ಎಂದು ಸಖರಾಯಪಟ್ಟಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಂದರ್ಯ ಜಗದೀಶ್ ತಿಳಿಸಿದರು.
ಅವರು ಇಂದು ನಗರದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಇಲ್ಲದಿದ್ದರೂ ವಿನಾಃಕಾರಣ ಕೋಮುವಾದಿಗಳು ಮತ್ತು ಜಾತಿವಾದಿ ಪಟ್ಟಬದ್ಧ ಹಿತಾಸಕ್ತಿಗಳು ಅಧಿಕಾರದ ಖುರ್ಚಿ ಆಸೆಗಾಗಿ ಜನಪರ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರವನ್ನು ಅಸ್ತಿರಗೊಳಿಸಲು ಕೇಂದ್ರ ಸರ್ಕಾರದ ಸಲಹೆಯಂತೆ ಬಿಜೆಪಿ-ಜೆಡಿಎಸ್ ಪಾಪದ ಪಾದಯಾತ್ರೆ ನಡೆಸುತ್ತಿದ್ದಾರೆಂದು ಆರೋಪಿಸಿದರು.
ಕಳೆದ ೪೦ ವರ್ಷಗಳ ರಾಜಕೀಯ ಭವಿಷ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಕಪ್ಪುಚುಕ್ಕಿ ಇಲ್ಲದಂತೆ ಆಡಳಿತ ನಡೆಸುತ್ತಿರುವುದನ್ನು ಸಹಿಸದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ ಕುಮಾರಸ್ವಾಮಿ ಇವರುಗಳು ನಡೆಸುತ್ತಿರುವ ಪಿತೂರಿಯನ್ನು ಖಂಡಿಸಿ ಸಧ್ಯದಲ್ಲೆ ಈ ಇಬ್ಬರ ಮನೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದರು.
ಬಿಜೆಪಿ-ಜೆಡಿಎಸ್ ನಾಯಕರ ಕುತಂತ್ರಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿದ್ದು ರಾಜ್ಯಪಾಲರ ಮೂಲಕ ರಾಜ್ಯಸರ್ಕಾರವನ್ನು ಅಸ್ತಿರಗೊಳಿಸಲು ಕೇಂದ್ರಸರ್ಕಾರ ಪಿತೂರಿ ನಡೆಸುತ್ತಿದೆ. ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಮತ್ತು ಹಿಂದುಳಿದ ವರ್ಗಗಳ ನಾಯಕತ್ವವನ್ನು ಕೊನೆಗಾಣಿಸಲು ಸಂಚು ರೂಪಿಸುತ್ತಿದೆ ಎಂದು ದೂರಿದರು.
ಹಿಂದೆ ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಭೋವಿ ನಿಗಮದ ೪೨ ಕೋಟಿ ರೂ ಹಗರಣ ನಡೆದಿರುವುದು ಕೋಟಾ ಶ್ರೀನಿವಾಸ್ ಪೂಜಾರಿ ಸಚಿವರಾಗಿದ್ದಾಗ ಆಗಿದೆ ಎಂದು ಲೆಕ್ಕಪರಿಶೋಧನೆಯಲ್ಲಿ ಬಹಿರಂಗವಾಗಿದೆ, ಬಸವರಾಜ್ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ೨೨೦ ಕೋಟಿ ರೂ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಮಾಹಿತಿ ನೀಡಿದರು.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಮಂಡಿಸಿದ ೨೦೨೪ ರ ಬಜೆಟ್ನಲ್ಲಿ ರಾಜ್ಯಕ್ಕೆ ಏನೂ ಕೊಡುಗೆ ನೀಡದಿರುವುದನ್ನು ಮರೆಮಾಚಲು ಬಿಜೆಪಿ-ಜೆಡಿಎಸ್ ಪಾಪದ ಪ್ರಾಯಶ್ಚಿತ್ತದ ಪಾದಯಾತ್ರೆ ನಡೆಸುತ್ತಿದ್ದಾರೆಂದು ಟೀಕಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಇಂದಿರಾಶಂಕರ್, ಪ್ರಧಾನ ಕಾರ್ಯದರ್ಶಿ ಆಶಾಸುರೇಶ್, ಜಿಲ್ಲಾ ಕಾರ್ಯದರ್ಶಿ ನೇತ್ರಾವತಿ, ಶೋಭಾ ಮತ್ತಿತರರು ಉಪಸ್ಥಿತರಿದ್ದರು.
BJP-JDS president’s home office besieged