ಚಿಕ್ಕಮಗಳೂರು: ಕಳೆದ ೨೦೧೬ ಕ್ಕಿಂತ ಮೊದಲು ೧ ರಿಂದ ೭ ಮತ್ತು ೧ ರಿಂದ ೮ ವೃಂದಕ್ಕೆ ನೇಮಕಾತಿಯಾದ ಎಲ್ಲಾ ಸಹ ಶಿಕ್ಷಕರು, ಪ್ರಾಥಮಿಕ ಶಾಲಾ ಶಿಕ್ಷಕರು, ೧ ರಿಂದ ೫ ಎಂದು ಪರಿಗಣಿಸಿ ಸರ್ಕಾರ ಆದೇಶಿಸಿದ್ದರಿಂದ ಸುಮಾರು ೧.೨೦ ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಿದ್ದು, ಈ ಆದೇಶವನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಆ.೧೨ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿರುವ ಪೂರ್ವಭಾವಿಯಾಗಿ ಇಂದು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ, ಜಿ.ಪಂ ಸಿಇಓ, ಉಪನಿರ್ದೇಶಕರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಶಾಖೆ ನಿರ್ಧರಿಸಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಭೈರೇಗೌಡ ಅವರು ೨೦೧೭ ರವರೆಗೆ ನೇಮಕವಾದ ಶಿಕ್ಷಕರನ್ನು ೧ ರಿಂದ ೭ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೭ ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು. ಇದನ್ನು ಯಾವುದೇ ಕಾರಣಕ್ಕೂ ೨೦೧೬ ಕ್ಕಿಂತ ಮೊದಲು ನೇಮಕಾತಿ ಆದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮೀಕರಿಸಬೇಕೆಂದು ಒತ್ತಾಯಿಸಿದರು.
ಇವರನ್ನು ೬ ರಿಂದ ೮ ಕ್ಕೆ ಪದವೀಧರ ಶಿಕ್ಷಕರೆಂದು ಪರಿಗಣಿಸದೆ ಇರುವುದು ದುರಾದೃಷ್ಟಕರ. ಇದರ ನಡುವೆ ೨೦೧೬ ರಿಂದ ಈಚೆಗೆ ೬ ರಿಂದ ೮ ವೃಂದದ ೨೦,೧೧೦ ಶಿಕ್ಷಕರ ನೇಮಕಾತಿಯಾಗಿದ್ದು, ಪರಿಣಾಮವಾಗಿ ಅಷ್ಟೇ ಸಂಖ್ಯೆಯ ೧ ರಿಂದ ೫ ವೃಂದದ ಶಿಕ್ಷಕರ ಹೆಚ್ಚುವರಿ ಸಮಸ್ಯೆ ಸೃಷ್ಟಿಯಾಗಿತ್ತು ಎಂದರು.
ಆದರೆ ವರ್ಗಾವಣೆ ಪ್ರಕ್ರಿಯೆಯಲ್ಲೂ ವೃಂದ ಬಲದ ನಿಗಧಿತ ಸ್ಥಳಗಳ ಆಯ್ಕೆಯಲ್ಲಿ ಶಿಕ್ಷಕರಿಗೆ ಸಮಸ್ಯೆ ಸೃಷ್ಟಿಸಿದೆ ಎಂದು ಆರೋಪಿಸಿದ ಅವರು ಲಕ್ಷಾಂತರ ಪ್ರಾಥಮಿಕ ಶಾಲಾಶಿಕ್ಷಕರಿಗೆ ಈ ಆದೇಶದಿಂದ ಬಹುದೊಡ್ಡ ಅನ್ಯಾಯವಾಗಿದೆ ಎಂದು ದೂರಿದರು.
ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ಒಂದು ಕಾರ್ಯಕಾರಿ ಆದೇಶವನ್ನು ಹೊರಡಿಸಬೇಕು ಎಂದು ಒತ್ತಾಯಿಸಿದ ಅವರು ಉಲ್ಲಂಘನೆಯಾಗಿರುವ ನಿಯಮಗಳನ್ನು ಸರಿಪಡಿಸುವ ಜತೆಗೆ ನಿರಂತರ ಸೇವಾನುಭವ ಮತ್ತು ಉನ್ನತ ವಿದ್ಯಾರ್ಹತೆ ಹೊಂದಿರುವ ಸೇವಾನಿರತ ಶಿಕ್ಷಕರಿಗೆ ಯಾವುದೇ ರೀತಿಯ ತಾರತಮ್ಯ ಹಾಗೂ ಅನ್ಯಾಯವಾಗದಂತೆ ನಿಯಮ ರೂಪಿಸಬೇಕು ಎಂದು ಒತ್ತಾಯಿಸಿದರು.
೧ ರಿಂದ ೮ನೇ ತರಗತಿಗೆ ನೇಮಕವಾದ ಶಿಕ್ಷಕರನ್ನು ಪಿಎಸ್ಟಿ ಎಂದು ಪದನಾಮ ಮಾಡಿ ೧-೫ ಕ್ಕೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಬೇಕು. ಅರ್ಹ ವಿದ್ಯಾರ್ಹತೆ ಪೂರೈಸಿರುವ ೨೦೧೬ ಕ್ಕಿಂತ ಮುಂಚೆ ನೇಮಕವಾದ ಎಲ್ಲ ಶಿಕ್ಷಕರಿಗೆ ಮೊದಲಿನ ಅರ್ಹತೆಯ ಆಧಾರದಲ್ಲಿ ಪ್ರೌಢಶಾಲೆಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.
ಮುಖ್ಯ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆ ಆಧಾರದ ಮೇಲೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದ ಅವರು ಇಂದು ಜಿಲ್ಲಾಧಿಕಾರಿ ಮೀನಾನಾಗರಾಜ್, ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್ ಕೀರ್ತನ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇದೇ ತಿಂಗಳ ೧೨ಕ್ಕೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಭಾಗವಹಿಸಿ ತಮ್ಮ ಹಕ್ಕನ್ನು ಪಡೆಯಲು ಕೈಜೋಡಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಬಿ.ಎಸ್, ತಾಲ್ಲೂಕು ಅಧ್ಯಕ್ಷ ಕಿರಣ್ ಕುಮಾರ್, ಪದಾಧಿಕಾರಿಗಳಾದ ಜಗದೀಶ್, ಶ್ರೀನಿವಾಸ್, ವಿಲ್ಮ, ಗೀತಾ, ಚೈತ್ರ ಮತ್ತಿತರರು ಉಪಸ್ಥಿತರಿದ್ದರು.
Petition seeking reversal of retrenchment order