ಚಿಕ್ಕಮಗಳೂರು: ಸೆಪ್ಟೆಂಬರ್ ೧೫ ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಾತ್ಯಾತೀತವಾಗಿ ಪ್ರತಿ ನಾಗರೀಕರ ಹಬ್ಬವನ್ನಾಗಿ ವಿಜೃಂಬಣೆಯಿಂದ ಆಚರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಕುವೆಂಪು ಕಲಾ ಮಂದಿರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸೆಪ್ಟೆಂಬರ್ ೧೫ ರಂದು ಬೀದರ್ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿಯನ್ನು ನಿರ್ಮಿಸಿ ಪ್ರತಿಯೊಬ್ಬ ಪ್ರಜೆಗೂ ಪ್ರಜಾಪ್ರಭುತ್ವದ ಮಹತ್ವವನ್ನು ಸಾರುವ ಕಾರ್ಯಕ್ರಮ ಇದಾಗಿದೆ. ಇದರ ಅಂಗವಾಗಿ ಜಿಲ್ಲೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ಮಾಗಡಿ ಕೈ ಮರದಿಂದ ಚಾಲನೆ ನೀಡಲಿರುವ ಕಾರ್ಯಕ್ರಮವು ನಗರ ಪ್ರವೇಶಿಸಿ ಎಐಟಿ ಸರ್ಕಲ್, ಸಖರಾಯಪಟ್ಟಣ, ಕಡೂರು-ಬೀರೂರು, ತರೀಕೆರೆ ಗಡಿ ಭಾಗವಾದ ಎಂಸಿ ಹಳ್ಳಿಯವರಿಗೂ ಒಟ್ಟು ೯೨ ಕಿ.ಮೀ ಮಾನವ ಸರಪಳಿ ನಿರ್ಮಿಸಿ ಸಂವಿಧಾನ ಬಗ್ಗೆ ತಿಳಿವಳಿಕೆ ಮೂಡಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.
ಪ್ರತಿ ೧ ಕಿ.ಮೀ ದೂರದಲ್ಲಿ ಆ ಭಾಗದ ಸ್ಥಳೀಯ ಶಾಲಾ ವಿದ್ಯಾರ್ಥಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು, ವಿವಿಧ ಸಂಘಟನೆಗಳು, ವಿವಿಧ ಸಮುದಾಯದ ಪ್ರಮುಖರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸ್ಥಳೀಯ ಜನ ಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಆ ಭಾಗದ ಗ್ರಾಮಗಳ ಜನತೆ, ಗ್ರಾಮದ ಮುಖಂಡರು, ಸ್ತ್ರೀಶಕ್ತಿ, ವಿವಿಧ ಸಂಘಗಳ ಪದಾಧಿಕಾರಿಗಳು ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಮಹತ್ವವನ್ನು ಸಾರಬೇಕು ಎಂದ ಅವರು ಈ ಬೃಹತ್ ಕಾರ್ಯಕ್ರಮದಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ ಎಂದರು.
ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತರಾಗಲು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಬಹಳ ಅವಶ್ಯಕವಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಸ್ವಯಂ ಭಾಗವಹಿಸಿ ಯಶಸ್ವಿಗೊಳಿಸಲು ಪ್ರತಿಯೊಂದು ಕಿ.ಮೀ. ಗೂ ಸರ್ಕಾರಿ ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ವಹಿಸಲಾಗಿದ್ದು, ಆಯಾಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲ್ಲೂಕು ಅಧಿಕಾರಿಗಳಿಗೆ ನಿಗಾ ವಹಿಸಲು ವಿವಿಧ ಕಾರ್ಯಕ್ರಮಗಳ ಉಸ್ತುವಾರಿವಹಿಸಲಾಗಿದೆ ಎಂದ ಅವರು ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳಾಗಿರುವಾಗ ಸ್ವತಂತ್ರ್ಯದ ಮಹತ್ವ ತಿಳಿದುಕೊಳ್ಳುವುದು ಬಹಳ ಮುಖ್ಯ ನಮ್ಮ ಸಂವಿಧಾನವು ಭಾರತೀಯರ ಹೆಮ್ಮೆ ಈ ಕಾರ್ಯಕ್ರಮದಲ್ಲಿ ಹಾಗೂ ದಾರಿ ಯುದ್ದಕ್ಕೂ ಆಯಾಯ ಭಾಗದಲ್ಲಿ ಸ್ಥಳೀಯ ಗ್ರಾಮಸ್ಥರು ಹಸಿರು ತೋರಣಗಳಿಂದ ಸಿಂಗರಿಸಿ ಹಬ್ಬದ ವಾತಾವರಣ ನಿರ್ಮಾಣ ಮಾಡುವತ್ತಾ ಎಲ್ಲಾ ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳು, ಸರ್ಕಾರಿ-ಖಾಸಗಿ ನೌಕರ ಶಾಲಾ ಕಾಲೇಜ್ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ವಿಜೃಂಬಣೆಯಿಂದ ಆಚರಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಯೋಗೀಶ್, ಚಿಕ್ಕಮಗಳೂರು ತಹಶೀಲ್ದಾರ್ ಡಾ. ಸುಮಂತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಾರನಾಥ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಡಿ. ರೇವಣ್ಣ, ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರುಗಳು, ಧಾರ್ಮಿಕ, ಸಾಂಸ್ಕೃತಿಕ ಮುಖಂಡರುಗಳು ಹಾಗೂ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ನೀಡಿದರು.
A preliminary meeting was held to celebrate International Democracy Day