ಚಿಕ್ಕಮಗಳೂರು: ಜಲಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ವಹಿಸಿ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯು ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಯಾಗಿದ್ದು, ಭಾರತದ ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ವೈಯಕ್ತಿಕವಾಗಿ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತವಾಗಿ ಸಮರ್ಪಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿಯಲ್ಲಿ ನಿರ್ವಹಿಸುತ್ತಿರುವ ಕಾಮಗಾರಿಯನ್ನು ಗ್ರಾಮದಲ್ಲಿ ನೀರಿನ ಮೂಲಗಳನ್ನು ಗುರುತಿಸಿ ವೈಜ್ಞಾನಿಕವಾಗಿ ಪೈಪ್ ಅಳವಡಿಸಿ ಸಮರ್ಪಕವಾಗಿ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ವಹಿಸಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.
ವಿಧಾನ ಪರಿಷತ್ ಶಾಸಕ ಸಿ.ಟಿ. ರವಿ ಮಾತನಾಡಿ ಕಡೂರಿನಿಂದ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಹಣ್ಣಿನ ಹಾಗೂ ಇತರೆ ಮರಗಳ ಸಸಿಗಳನ್ನು ನೆಟ್ಟು ಅವುಗಳ ನಿರ್ವಹಣೆ ಸರಿಯಾದ ರೂಪದಲ್ಲಿ ನಡೆಸಿ ಪರಿಸರ ಕಾಳಜಿಯಿಂದ ಸಂಬಂಧ ಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ವಹಿಸಬೇಕು, ಹಾಗೂ ಇತರೆ ಪ್ರದೇಶಗಳಿಂದ ಉದ್ಯೋಗ ಅರಸಿ ಜಿಲ್ಲೆಗೆ ಬರುವ ಪ್ರತಿಯೊಬ್ಬ ವಲಸೆ ಕಾರ್ಮಿಕರ ಸ್ಪಷ್ಟ ಮಾಹಿತಿಯನ್ನು ಕಲೆ ಹಾಕಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿರುವವರ ವಿರುದ್ಧ ಕಾನೂನು ಕ್ರಮ ವಹಿಸಬೇಕು. ಕಾರ್ಖಾನೆ ಹಾಗೂ ಇತರೆ ಕಾಫಿ ಎಸ್ಟೇಟ್ಗಳಲ್ಲಿ ಕೆಲಸ ನಿರ್ವಹಿಸುವ ಹೊರ ರಾಜ್ಯದ ಕಾರ್ಮಿಕರ ಮಾಹಿತಿಯಲ್ಲಿ ಗೊಂದಲವಿದ್ದಲ್ಲಿ ನಿರ್ಲಕ್ಷಿಸದೆ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.
ಕಾರ್ಮಿಕ ಇಲಾಖೆ ಅಧಿಕಾರಿ ಮಾತನಾಡಿ ಕಾಫಿ ಎಸ್ಟೇಟ್ಗಳಿಗೆ ಬರುವ ಕಾರ್ಮಿಕರ ಮಾಹಿತಿಯನ್ನು ಕಲೆ ಹಾಕಿ ಇಲಾಖೆಗೆ ಸಲ್ಲಿಸಲು ಎಸ್ಟೇಟ್ ಮಾಲೀಕರಿಗೆ ಸೂಚಿಸಲಾಗಿದೆ. ಯಾವುದೇ ಕಾರ್ಮಿಕನ ವಿಳಾಸ, ಮಾಹಿತಿಯಲ್ಲಿ ಗೊಂದಲವಿದ್ದಲ್ಲಿ ಪೊಲೀಸ್ ಇಲಾಖೆ ಸಹಕಾರದೊಂದಿಗೆ ಕ್ರಮ ವಹಿಸಲಾಗುತ್ತಿದೆ ಎಂದರು.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಒಡೆದು ಹಾಕಲಾಗಿರುವ ಮನೆಗಳ ಫಲಾನುಭವಿಗಳಿಗೆ ಶೀಘ್ರವಾಗಿ ಪರಿಹಾರ ನೀಡಬೇಕು, ಹಾಗೂ ಬೇಲೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕ್ರಮವಹಿಸಬೇಕು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿಎನ್ ಮಾತನಾಡಿ ಬೇಲೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಯೋಜನಾ ವರದಿ ವಿವರವನ್ನು ಸಲ್ಲಿಸಲಾಗಿದೆ, ಹೆದ್ದಾರಿ ನಿರ್ಮಾಣ ವೇಳೆಯಲ್ಲಿ ಒಡೆದು ಹಾಕಲಾಗಿರುವ ಮನೆಗಳ ಫಲಾನುಭವಿಗಳಿಗೆ ಪರಿಹಾರ ಒದಗಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದರು.
ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಮಾತನಾಡಿ ಜಿಲ್ಲೆಯಲ್ಲಿ ಅನೇಕ ಸರ್ಕಾರಿ ಆಸ್ಪತ್ರೆಗಳಿಗೆ ಆಂಬುಲೆನ್ಸ್ ಅವಶ್ಯಕತೆ ಇದ್ದು, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಹಾಗೂ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಿ ಕೊಡಲು ಕ್ರಮ ವಹಿಸಬೇಕು ಎಂದರು. ಆರೋಗ್ಯ ಇಲಾಖೆ ಅಧಿಕಾರಿ ಮಾತನಾಡಿ ಜಿಲ್ಲೆಗೆ ಒಟ್ಟು ೯ ಆಂಬುಲೆನ್ಸ್ ಗಳ ಅಗತ್ಯವಿದ್ದು ಇಲಾಖೆ ವತಿಯಿಂದ ಸದ್ಯ ೭ ಅಂಬುಲೆನ್ಸ್ಗಳು ಬಂದಿದ್ದು, ಉಳಿದ ಎರಡು ವಾಹನಗಳ ವ್ಯವಸ್ಥೆಯನ್ನು ಶೀಘ್ರವಾಗಿ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ. ಮಳೆಯಿಂದ ಹಾನಿಯಾಗಿರುವ ರಸ್ತೆ ಹಾಗೂ ವಿದ್ಯುತ್ ಕಂಬಗಳ ವ್ಯವಸ್ಥೆಯನ್ನು ಪರಿಶೀಲಿಸಿ ಅವುಗಳನ್ನು ದುರಸ್ಥಿಗೊಳಿಸಿ ಯಾವುದೇ ಅಪಘಾತ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದ ಅವರು. ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಿಳಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಫಲ ಗಳಿಸಿಕೊಡುವಂತೆ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್ ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ನಗರ ಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಬೀರೂರು ಪುರಸಭೆ ಅಧ್ಯಕ್ಷೆ ವನಿತಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
Scientifically manage Jaljeevan Mission work