ಚಿಕ್ಕಮಗಳೂರು: ಜಿಲ್ಲಾಡಳಿತದಿಂದ ನವೆಂಬರ್ ೦೧ ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ ಕರೆಯಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನವೆಂಬರ್ ೧ರಂದು ಬೆಳಿಗ್ಗೆ ೯ ಗಂಟೆಗೆ ನೇತಾಜಿ ಸುಭಾಷ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ, ಧ್ವಜಾರೋಹಣ ನಡೆಸಲಾಗುತ್ತದೆ. ನಾಡಿನ ಸಂಸ್ಕೃತಿ, ಭಾಷೆಯನ್ನು ಬಿಂಬಿಸುವ ಸ್ತಬ್ಧಚಿತ್ರಗಳೊಂದಿಗೆ ನಗರದ ತಹಶೀಲ್ದಾರ್ ಕಚೇರಿಯಿಂದ ಜಿಲ್ಲಾ ಆಟದ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. ವಿದ್ಯಾರ್ಥಿಗಳಿಂದ ಕನ್ನಡ ಸಮೂಹ ಗೀತ ಗಾಯನ ನಡೆಯಲಿದ್ದು, ಸಂಜೆ ನಗರದ ಕುವೆಂಪು ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.
ರಾಜ್ಯೋತ್ಸವ ಆಚರಣೆಗೆ ಪ್ರತಿಯೊಬ್ಬರ ಸಹಕಾರ ಅವಶ್ಯಕ ಎಲ್ಲಾ ಕನ್ನಡ ಪರ ಸಂಘಟನೆಗಳು ಸಹಕರಿಸಬೇಕು. ಸರ್ಕಾರಿ ನೌಕರರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದ ಅವರು ರಾಜ್ಯೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿತವಾಗಿ ಆಯೋಜಿಸಿ ಯಶಸ್ವಿಗೊಳಿಸಲು ವಿವಿಧ ಇಲಾಖೆಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ಪ್ರತಿ ಇಲಾಖೆಯು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ಮತ್ತು ತಮ್ಮ ಇಲಾಖೆಗಳ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ಅಕ್ಟೋಬರ್ ೩೧ ರಿಂದ ನವೆಂಬರ್ ೦೨ ರವರೆಗೆ ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಮುಖ್ಯ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ರಾಜ್ಯೋತ್ಸವ ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ನವೆಂಬರ್ ೦೧ ರಂದು ಜರುಗುವ ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ಮಾಡುವರು. ನಂತರ ಜಿಲ್ಲೆಯ ಜನತೆಗೆ ರಾಜ್ಯೋತ್ಸವದ ಸಂದೇಶ ನೀಡುವರು ಎಂದರು.
ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Meaningful Kannada Rajyotsava celebrations on November 01