ಚಿಕ್ಕಮಗಳೂರು: ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿರುವ ಕೆಸ್ವಾನ್ನಲ್ಲಿ ಇಂದು ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ದಸ್ತಾನು ಹಾಗೂ ಹಸಿರು ಪಟಾಕಿ ಮಾರಾಟ ಮಾಡುವ ಕುರಿತು ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾತ್ರಿ ೮.೦೦ ರಿಂದ ೧೦.೦೦ ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಆದ ಕಾರಣ ವ್ಯಾಪಾರಸ್ಥರು ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕೆಂದು ತಿಳಿಸಿದರು
ಪರಿಸರ ಸ್ನೇಹಿ ಪಟಾಕಿಗಳನ್ನು ಸಿಡಿಸುವ ಕುರಿತು ತಮ್ಮ ವ್ಯಾಪ್ತಿಯ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ ಮಾತನಾಡಿ ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಾಡಲು ಪರವಾನಗಿ ಪಡೆದಿರುವ ಮಾರಾಟಗಾರರು ಮಾತ್ರ ಪಟಾಕಿ ಮಾರಾಟ ಮಾಡಬೇಕು. ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದ ಅವರು ಆನ್ ಲೈನ್ ಮೂಲಕ ಪಟಾಕಿ ಖರೀದಿಸುವುದನ್ನು ನಿಷೇಧಿಸಲಾಗಿದೆ ಎಂದರು.
ಸಭೆಯಲ್ಲಿ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರ್ರು, ನಗರಸಭೆ ಆಯುಕ್ತ ಬಸವರಾಜು, ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Let’s celebrate pollution free Diwali