ಚಿಕ್ಕಮಗಳೂರು: ಜಿಲ್ಲೆಯಲ್ಲಿ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಇಂದು ಬಿಜೆಪಿ ವತಿಯಿಂದ ಮಾನವ ಸರಪಳಿ ರಚಿಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇಂದು ಬೆಳಗ್ಗೆ ತಾಲ್ಲೂಕು ಕಚೇರಿ ಆವರಣದಿಂದ ನಗರ ಬಿಜೆಪಿ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಕಾರ್ಯಕರ್ತರು ರಾಜ್ಯಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ರೈತರಿಗೆ ನ್ಯಾಯ ದೊರಕಿಸುವಂತೆ ಒತ್ತಾಯಿಸಿ ಹನುಮಂತಪ್ಪ ವೃತ್ತದ ಬಳಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಕಡೆಗಳಲ್ಲಿ ಕೃಷಿಭೂಮಿ, ದೇವಾಲಯ ಸೇರಿದಂತೆ ಶತಶತಮಾನಗಳಿಂದ ಸಾಗು ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಜಮೀನು ಈಗ ವಕ್ಫ್ ಆಸ್ತಿ ಎಂದು ದಾಖಲಾಗಿರುವುದನ್ನು ರದ್ದುಪಡಿಸುವಂತೆ ಮತ್ತು ದೇಶದಲ್ಲಿ ಏಕರೂಪ ನಾಗರೀಕ ಕಾಯಿದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ವಕ್ಫ್ ರಚನೆಯಾಗುವ ಪೂರ್ವದಿಂದಲೇ ರೈತರು ಅಗತ್ಯ ದಾಖಲೆಗಳೊಂದಿಗೆ ಸಾಗುವಳಿ ಮಾಡಿಕೊಂಡು ಬಂದಿದ್ದು ಈಗ ದಿಡೀರ್ ಎಂದು ಜಮೀನ್ ವಕ್ಫ್ ಆಸ್ತಿ ಎಂದು ದಾಖಲೆ ಸೃಷ್ಟಿಸಿರುವ ಮೂಲಕ ಬಡ ಕೃಷಿಕರು, ಹಿಂದುಳಿದ ವರ್ಗದವರು, ದಲಿತರು ಸೇರಿದಂತೆ ಎಲ್ಲಾ ವರ್ಗದ ಜನರು ಭೀತಿಗೆ ಒಳಗಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ರೈತರ ಭೂಮಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನಮೂದಾಗಿರುವುದರಿಂದ ರೈತರು ಆತಂಕಕ್ಕೊಳಗಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಕಾರಣರಾಗಿದ್ದಾರೆ. ಇದೊಂದು ಲ್ಯಾಂಡ್ ಜೀಹಾದ್ ರೂಪದಂತಿದೆ. ರೈತರು ತಮ್ಮ ಜಮೀನಿನ ಪಹಣಿಯನ್ನು ಪರಿಶೀಲಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ಕ್ರಮ ಕೈಗೊಂಡಿರುವುದಾಗಿ ಸಚಿವ ಜಮೀರ್ ಅಹಮದ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇಷ್ಟೆಲ್ಲಾ ಆತಂಕ ಸೃಷ್ಟಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಆರೋಪಿಸಿದ ಅವರು, ಕೂಡಲೇ ವಕ್ಫ್ ಸೃಷ್ಟಿಸಿರುವ ಆತಂಕವನ್ನು ಪರಿಹರಿಸಲು ತ್ವರಿಕ ಕ್ರಮ ಅನುಸರಿಸಬೇಕೆಂದು ಆಗ್ರಹಿಸಿದ್ದಾರೆ.
ಈ ರೀತಿಯ ಎಲ್ಲಾ ಸಮಸ್ಯೆಗಳಿಗೆ ದೇಶದಲ್ಲಿ ಏಕ ನಾಗರೀಕ ಕಾಯಿದೆ ಜಾರಿಯ ತುರ್ತು ಅಗತ್ಯವಿದ್ದು ಕಾಂಗ್ರೆಸ್ ಸರ್ಕಾರ ಮುಸ್ಲಿಂರ ತುಷ್ಟೀಕರಣದ ಮೂಲಕ ಸಂವಿಧಾನ ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ. ರಾಜ್ಯ ಸರ್ಕಾರದ ಈ ಕ್ರಮವನ್ನು ಖಂಡಿಸಿ ರೈತರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ನಗರ ಮಂಡಲ ಅಧ್ಯಕ್ಷ ಪುಷ್ಪರಾಜ್ ಕೆ.ಎಸ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹೆಚ್.ಸಿ ಕಲ್ಮರುಡಪ್ಪ, ವಕ್ತಾರ ಹೆಚ್.ಎಸ್ ಪುಟ್ಟಸ್ವಾಮಿ, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್, ಉಪಾಧ್ಯಕ್ಷೆ ಅನುಮಧುಕರ್, ಬೆಳವಾಡಿ ರವೀಂದ್ರ, ಕೋಟೆ ರಂಗನಾಥ್, ಮಧುಕುಮಾರ್ ರಾಜ್ ಅರಸ್, ಸಿ.ಹೆಚ್ ಲೋಕೇಶ್, ಐ.ಕೆ ಓಂಕಾರೇಗೌಡ, ಕವಿತಾ ಶೇಖರ್, ಜೆಸೆಂತಾ ಅನಿಲ್ಕುಮಾರ್, ಪುಷ್ಟ ರಾಜೇಂದ್ರ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಿದ್ದರು.
Massive protest by BJP demanding cancellation of waqf property