ಚಿಕ್ಕಮಗಳೂರು: ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಐಕ್ಯತಾ ಮನೋಭಾವ ವೃದ್ಧಿಯಾಗುವುದರೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಸುಸ್ಥಿತಿಯಲ್ಲಿರುತ್ತದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಹಾಗೂ ತಾಲ್ಲೂಕು ಗ್ರೇಡ್-೨ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಇಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾ ಕೂಟ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಶೇಷ ಚೇತನ (೧೪/೧೭ ವಯೋಮಾನ) ಮಕ್ಕಳ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ಕೊಡಿಸುವುದು ಬಹುಮುಖ್ಯವಾಗಿದೆ. ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರ ಅಭ್ಯಾಸದ ಜೊತೆಗೆ ಶಿಕ್ಷಣದ ಪೂರಕ ಚಟುವಟಿಕೆಗಳಾದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯ ಎಂದರು.
ಮಕ್ಕಳು ತಮ್ಮ ಐಚ್ಛಿಕ ವಿಷಯದಲ್ಲಿ ವಿಶೇಷ ಆಸಕ್ತಿ ಹಾಗೂ ಜ್ಞಾನವನ್ನು ಹೊಂದಿರುತ್ತಾರೆ. ಅವುಗಳನ್ನು ಗುರುತಿಸಿ ಅವರ ಪ್ರತಿಭೆಯನ್ನು ಸಮಾಜಕ್ಕೆ ಪರಿಚಯಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿರುತ್ತದೆ. ಪೋಷಕರು ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಅವರ ಕ್ರೀಡಾಸಕ್ತಿಯನ್ನು ಪ್ರೋತ್ಸಾಹಿಸಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳು ದೈಹಿಕವಾಗಿ ಸಧೃಡರಾಗಿರುತ್ತಾರೆ ಎಂದರು.
ರೋಗ ಮುಕ್ತರಾಗಿರಲು ಸಹಕಾರಿಯಾಗಿರುತ್ತದೆ ಹಾಗೂ ನಾಯಕತ್ವದ ಗುಣಗಳು ಬೆಳೆಯುತ್ತದೆ. ಸ್ಪರ್ಧಾ ಮನೋಭಾವವು ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುತ್ತದೆ. ಯಾವುದೇ ಸ್ಪರ್ಧೆಗಳಲ್ಲಿ ಸೋಲು, ಗೆಲುವಿನ ಫಲಿತಾಂಶಗಳಿಗೆ ತಲೆದೂಗದೆ ನಿಶ್ಚಿಂತೆಯಿಂದ ಭಾಗವಹಿಸಿ ಉತ್ತಮ ರೀತಿಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವವರು ಉತ್ತಮ ಕ್ರೀಡಾಪಟುಗಳಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ದೊರಕಿರುವುದು ಸಂತಸದ ವಿಷಯ ಎಂದ ಅವರು ಸರ್ಕಾರವು ಕ್ರೀಡೆಯನ್ನು ಪ್ರೋತ್ಸಾಹಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡಲ್ಲಿ ತಮ್ಮ ಗುರಿ ತಲುಪಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಯು.ವಿ ಪಾಲಾಕ್ಷಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿ. ಕ್ರೀಡೆಯು ಮಕ್ಕಳಲ್ಲಿ ಶಿಸ್ತು ಹಾಗೂ ಬದ್ಧತೆಯ ಪ್ರಜ್ಞೆಯನ್ನು ಕಲಿಸುತ್ತದೆ .ಸಮುದಾಯ ಮತ್ತು ಸೌಹಾರ್ದತೆಯ ಭಾವವನ್ನು ಒದಗಿಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಬಹು ಮುಖ್ಯ ಪಾತ್ರ ವಹಿಸಿದ್ದು ಅವರ ಪ್ರತಿಭೆಗಳನ್ನು ಹೊರಹಾಕಲು ಕ್ರೀಡಾಕೂಟವು ಮುಖ್ಯ ವೇದಿಕೆಯಾಗಿದೆ ಎಂದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಭೈರೇಗೌಡ ಮಾತನಾಡಿ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳು ದೈಹಿಕವಾಗಿ ಸಕ್ರಿಯವಾಗಿರಲು ಸಹಾಯ ಮಾಡುತ್ತದೆ. ನಿಯಮಿತ ದೈಹಿಕ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಸಮನ್ವಯತೆ ಹಾಗೂ ದೈಹಿಕ ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಸ್ನಾಯುಗಳ ಬೆಳವಣಿಗೆಯನ್ನು ವೃದ್ಧಿಸಿ ಸದಾ ಆರೋಗ್ಯವಾಗಿರಲು ಕ್ರೀಡೆ ಸಹಕಾರಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರನಾಯ್ಕ, ಜಿಲ್ಲಾ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ. ಕುಮಾರಸ್ವಾಮಿ, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಯ್ಯ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಪರಮೇಶ್ವರಪ್ಪ ಸೇರಿದಂತೆ ವಿವಿಧ ಶಿಕ್ಷಕರ ಸಂಘದ ಪದಾಧಿಕಾರಿಗಳು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
District level sports meet for specially gifted children