ಚಿಕ್ಕಮಗಳೂರು: ಜಿಲ್ಲೆಯಲ್ಲಿನ ಬಾಲಕಾರ್ಮಿಕರನ್ನು ಗುರುತಿಸಿ ಅವರನ್ನು ರಕ್ಷಿಸುವುದರ ಜೊತೆಗೆ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ೬ ರಿಂದ ೧೪ ವರ್ಷದೊಳಗಿನ ಶಾಲೆಯಿಂದ ಹೊರಗುಳಿದು ಹೋಟೆಲ್, ಕಾರ್ಖಾನೆ, ಎಸ್ಟೇಟ್ ಹಾಗೂ ಇತರೆ ಅಪಾಯಕಾರಿ ಕೆಲಸಗಳಲ್ಲಿ ತೊಡಗಿಕೊಂಡಿರುವ ಮಕ್ಕಳನ್ನು ಗುರುತಿಸಿ ಕೆಲಸಕ್ಕೆ ಕಳುಹಿಸುವ ಪೋಷಕರಿಗೆ ಅರಿವು ಮೂಡಿಸಿ ಮಕ್ಕಳನ್ನು ಶಾಲೆಗೆ ಕರೆತಂದು ಉತ್ತಮ ಶಿಕ್ಷಣ ನೀಡಬೇಕು ಹಾಗೂ ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯವನ್ನು ತಡೆಗಟ್ಟಿ ದೌರ್ಜನ್ಯವೆಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಬಾಲ್ಯ ವಿವಾಹ, ಹೆಣ್ಣು ಭ್ರೂಣ ಹತ್ಯೆ, ಮಾನವ ಕಳ್ಳ ಸಾಗಾಣಿಕೆ ಚಟುವಟಿಕೆಗಳು ನಡೆಯದಂತೆ ಕ್ರಮವಹಿಸಬೇಕು ಎಂದರು.
ಮಹಿಳೆಯರು ಹಾಗೂ ಮಕ್ಕಳಿಗೆ ಇಲಾಖೆ ವತಿಯಿಂದ ನೀಡುವ ಸೌಲಭ್ಯ ಮತ್ತು ಯೋಜನೆಗಳ ಕುರಿತು ಮಾಹಿತಿ ನೀಡಬೇಕು. ಹಿಂಸಾಚಾರ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು ಒಂದೇ ಸೂರಿನಡಿ ವೈದ್ಯಕೀಯ ಸೇವೆ, ಪೊಲೀಸ್ ಸೇವೆ, ಕಾನೂನು ಸೇವೆ ಒದಗಿಸುವ ಒನ್ ಸ್ಟಾಪ್ ಸೆಂಟರ್ಗಳಿಗೆ ಕರೆತಂದು ಅವರ ಕಷ್ಟಗಳನ್ನು ಆಲಿಸಿ ಸಮಾಲೋಚನೆ ನಡೆಸಿ ತಾತ್ಕಾಲಿಕ ವಸತಿ ಒದಗಿಸುವುದರ ಜೊತೆಗೆ ಧೈರ್ಯ ತುಂಬುವ ಕೆಲಸ ಮಾಡಬೇಕು.
ಮಕ್ಕಳ ಸಹಾಯವಾಣಿ ಸಂಖ್ಯೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿ ಅರಿವು ಮೂಡಿಸಬೇಕು. ಸಹಾಯವಾಣಿ ಮೂಲಕ ಬರುವ ಯಾವುದೇ ದೂರುಗಳನ್ನು ನಿರ್ಲಕ್ಷಿಸದೇ ಪರಿಶೀಲಿಸಿ ತಕ್ಷಣ ಕ್ರಮ ಜರುಗಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ಪೌಷ್ಠಿಕ ಆಹಾರ ವಿತರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಮಾತನಾಡಿ. ಇತ್ತೀಚಿನ ದಿನಗಳಲ್ಲಿ ಮಹಿಳೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಈ ವರ್ಷ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ ಒಟ್ಟು ೬೩ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ೪೩ ಪ್ರಕರಣಗಳು ವಿಚಾರಣೆ ಹಾಗೂ ೨೦ ಪ್ರಕರಣಗಳು ತನಿಕೆಯಲ್ಲಿವೆ. ದೌರ್ಜನ್ಯ ವೆಸಗುವ ವ್ಯಕ್ತಿಗೆ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಪ್ರತಿ ಮಹಿಳೆ ಹಾಗೂ ಮಕ್ಕಳಿಗೆ ಕಾನೂನುಗಳ ಕುರಿತು ಅರಿವು ಮೂಡಿಸಿ ಅವರ ಏಳಿಗೆಗೆ ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಮಾತನಾಡಿ. ಮಕ್ಕಳ ಪಾಲನ ಸಂಸ್ಥೆ ಹಾಗೂ ಬಾಲ ಮಂದಿರದಲ್ಲಿರುವ ಮಕ್ಕಳಿಗೆ ಕುಟುಂಬ ವಾತಾವರಣ ನಿರ್ಮಿಸಿಕೊಡುವ ಉದ್ದೇಶದಿಂದ ಪಾಲನ ಸಂಸ್ಥೆಗೆ ದಾಖಲಾಗುವ ಎಲ್ಲಾ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆ, ಶಿಕ್ಷಣದ ಅಗತ್ಯತೆಗಳನ್ನು ಪೂರೈಸಲು ಹಾಗೂ ಮಗುವಿನ ಜೀವನ ಉತ್ತಮಗೊಳಿಸಲು ಪ್ರತಿ ಮಗುವಿಗೆ ರೂ. ೪೦೦೦ ಮಾಸಿಕ ಆರ್ಥಿಕ ಸೌಲಭ್ಯವನ್ನು ಮಕ್ಕಳ ವೈಯಕ್ತಿಕ ಖಾತೆಗೆ ಜಮೆ ಮಾಡಲಾಗುತ್ತಿದೆ. ಕೋವಿಡ್ ಕಾರಣದಿಂದ ಪೋಷಕರನ್ನು ಕಳೆದುಕೊಂಡ ಜಿಲ್ಲೆಯ ೬ ಮಕ್ಕಳಿಗೆ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಮೆರೆಗೆ ಪಾಲನೆ, ಪೋಷಣೆ, ರಕ್ಷಣೆ ಹಾಗೂ ಶಿಕ್ಷಣ ಒದಗಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಒಟ್ಟು ೪೮ ಬಾಲ್ಯ ವಿವಾಹ ಸಂಬಂಧಿಸಿದ ದೂರುಗಳು ದಾಖಲಾಗಿದ್ದು ಇವುಗಳಲ್ಲಿ ೪೪ ಬಾಲ್ಯ ವಿವಾಹವನ್ನು ತಡೆಯಲಾಗಿದೆ. ಉಳಿದ ೪ ಪ್ರಕರಣಗಳಿಗೆ ಎಫ್ಐಆರ್ ಮಾಡಲಾಗಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ದತ್ತು ಕಾರ್ಯಕ್ರಮ ಮತ್ತು ಮಕ್ಕಳ ರಕ್ಷಣಾ ನೀತಿ ಕುರಿತು ತರಬೇತಿ ನೀಡಿ ಅರಿವು ಮೂಡಿಸಲಾಗುತ್ತಿದೆ.
ಮಕ್ಕಳ ಸಹಾಯ ವಾಣಿ ೧೦೯೮/೧೧೨ ಸಂಖ್ಯೆಯನ್ನು ಪೋಸ್ಟರ್ಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಿ ಮಾಹಿತಿ ನೀಡಲಾಗುತ್ತಿದ್ದು, ಸದ್ಯ ಸಹಾಯವಾಣಿ ಮೂಲಕ ೨೮ ದೂರುಗಳು ದಾಖಲಾಗಿವೆ. ಅವುಗಳ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದ ಅವರು ಬಾಲಕಾರ್ಮಿಕರ ನಿಷೇಧ ಕಾಯ್ದೆಯ ಕುರಿತು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತನಾ ಹೆಚ್.ಎಸ್., ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ಬಾಬು, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುರೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿ ಸಿಬ್ಬಂದಿಗಳು , ವಿವಿಧ ಸಮಿತಿಯ ಪದಾಧಿಕಾರಿಗಳು, ಉಪಸ್ಥಿತರಿದ್ದರು.
District Child Protection Committee Quarterly Progress Review Meeting