ಚಿಕ್ಕಮಗಳೂರು: ಮಹಿಳಾ ಸಬಲೀಕರಣಕ್ಕೆ ಕಾನೂನು ಅರಿವು ಬಹುಮುಖ್ಯವಾಗಿದೆ. ಮಹಿಳೆಯರು ತಮ್ಮ ಹಕ್ಕು ಮತ್ತು ಕಾನೂನು ಸೇವೆಗಳ ಕುರಿತು ಮಾಹಿತಿ ಪಡೆದು ಪ್ರಬಲರಾಗಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈದ್ಯಕೀಯ ವಿಜ್ಞಾನ ಸಂಸ್ಥೆ ಚಿಕ್ಕಮಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಸಬಲೀಕರಣ ಘಟಕ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ನೆನ್ನೆ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಸಂರಕ್ಷಣೆಗೆ ಸಂಬಂಧಿಸಿದ ಕಾನೂನು ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಮಹಿಳೆಗೂ ಸ್ವತಂತ್ರವಾಗಿ ಬದುಕುವ ಮತ್ತು ಮುಕ್ತವಾಗಿ ತನ್ನನ್ನು ತಾನು ವ್ಯಕ್ತಪಡಿಸಿಕೊಳ್ಳುವ ಸ್ವತಂತ್ರವಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಮನೆ ಮತ್ತು ಕೆಲಸದ ಸ್ಥಳಗಳಲ್ಲಿ ತಾರತಮ್ಯ ಅಥವಾ ಇತರೆ ಅನ್ಯಾಯದ ಕೃತ್ಯಗಳು ಹಾಗೂ ಅಪರಾಧಗಳನ್ನು ಎದುರಿಸುತ್ತಿದ್ದಾರೆ. ಇವರನ್ನು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸುಧಾರಿಸಿ ಸಮಾಜದಲ್ಲಿ ನಿರ್ಭೀತಿಯಿಂದ ಜೀವಿಸುವ ವಾತಾವರಣ ಸೃಷ್ಠಿಸಿಕೊಳ್ಳಲು ಪ್ರತಿಯೊಬ್ಬ ಮಹಿಳೆಯು ಕಾನೂನು ತಿಳಿಯುವುದು ಅವಶ್ಯಕವಾಗಿದೆ ಎಂದರು.
ಮಹಿಳೆಯರ ಮೇಲೆ ದೌರ್ಜನ್ಯವು ಅನಾದಿ ಕಾಲದಿಂದಲೂ ನಡೆದುಕೊಂಡು ಬರುತ್ತಿದ್ದು, ಇವುಗಳ ತಡೆಗಟ್ಟುವಲ್ಲಿ ಸಂವಿಧಾನಬದ್ಧ ಹಕ್ಕು ಮತ್ತು ಸಂರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿವೆ. ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ಕಂಡು ಬಂದಲ್ಲಿ ಅಪರಾಧ ಎಸಗಿದವರು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಮಹಿಳೆಯರು ಮತ್ತು ಮಕ್ಕಳು ಕಡ್ಡಾಯವಾಗಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ, ವರದಕ್ಷಿಣೆ ನಿಷೇಧ ಕಾಯ್ದೆ ಅಗತ್ಯ ಎಂದರು.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಬಾಲ್ಯ ವಿವಾಹ ತಡೆ ಕಾಯ್ದೆ, ಫೋಕ್ಸೋ ಕಾಯ್ದೆ, ಕಾನೂನು ಬದ್ಧ ದತ್ತು ಸ್ವೀಕಾರ, ಮಹಿಳೆಯರಿಗೆ ಸಮಾನ ಆಸ್ತಿ ಹಕ್ಕು, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ನಿಷೇಧ ಕಾಯ್ದೆ ಹಾಗೂ ಕಾನೂನುಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದ ಅವರು ಪ್ರತಿಯೊಬ್ಬರು ಮಹಿಳಾ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಮಾತನಾಡಿ ವಾಸ್ತವವಾಗಿ ಗಮನಿಸುವ ಬಾಲ ಕಾರ್ಮಿಕರು ಮತ್ತು ಮಾನಸಿಕ ಅಸ್ವಸ್ಥ ಮಹಿಳೆಯರನ್ನು ರಕ್ಷಿಸಲು ಅನೇಕ ಕಾನೂನಾತ್ಮಕ ಸೇವೆಗಳು ಹಾಗೂ ಸರ್ಕಾರದ ಯೋಜನೆಗಳಿದ್ದು, ಇಲಾಖೆಯಿಂದ ದೌರ್ಜನ್ಯಕ್ಕೊಳಗಾದ ಮಹಿಳೆ ಹಾಗೂ ಮಕ್ಕಳನ್ನು ರಕ್ಷಿಸಲಾಗುತ್ತಿದೆ. ಮಹಿಳೆಯರು ಯಾವುದೇ ರೀತಿಯ ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದಲ್ಲಿ ದೂರು ಸಲ್ಲಿಸಿ ನ್ಯಾಯ ಪಡೆದುಕೊಳ್ಳಬೇಕು ಎಂದ ಅವರು ಯೋಜನೆಗಳ ಕುರಿತು ಮಾಹಿತಿ ಪಡೆದು ಸ್ವಾವಲಂಬಿಗಳಾಗಿ ಬದುಕಿ ಎಂದರು.
ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನ ಸಂಸ್ಥೆ ಡೀನ್ ಮತ್ತು ನಿರ್ದೇಶಕ ಡಾ. ಹರೀಶ್ ಎಂ. ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸಂತೋಷ್ ಡಿ, ಜಿಲ್ಲಾ ನಿರೂಪಣಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕೇಶ್ವರಪ್ಪ ಉಪಸ್ಥಿತರಿದ್ದರು.
Legal Awareness Workshop on Protection of Women and Children