ಚಿಕ್ಕಮಗಳೂರು: ರಾಜ್ಯದ ಅಭಿವೃದ್ಧಿಗೆ ವಿವಿಧ ರೀತಿಯ ಕೊಡುಗೆಯನ್ನು ನೀಡಿದ ಹಿರಿಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ರಾಜ್ಯ ಕಳೆದುಕೊಂಡಂತಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ಹೆಚ್.ಹೆಚ್.ದೇವರಾಜ್ ತಿಳಿಸಿದರು.
ಇಂದು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಹಿರಿಯ ರಾಜಕಾರಣಿ, ಮುತ್ಸದ್ದಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಿಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ಎಸ್.ಎಂ.ಕೃಷ್ಣ ಅವರು ಉತ್ತಮ ಸಂಸ್ಕಾರದ ಜೀವನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಾಮಾಜಿಕ ಕಾರ್ಯಗಳು ಇಂದಿಗೂ ಜೀವಂತವಾಗಿವೆ. ಅತ್ಯಂತ ಕಿರಿಯ ವಯಸ್ಸಿನಲ್ಲಿ ವಿವಿಧ ಸ್ಥಾನಮಾನಗಳನ್ನು ಹೊಂದಿದ್ದರು ಎಂದು ಹೇಳಿದರು.
ರಾಜಧಾನಿ ಬೆಂಗಳೂರಿಗೆ ಅಭಿವೃದ್ಧಿಯ ಮೂಲಕ ಹೊಸ ರೂಪವನ್ನು ಕೊಡುವುದರೊಂದಿಗೆ ಐಟಿ, ಬಿಟಿ ಕೇಂದ್ರವಾಗಿ ಜಗತ್ತಿನ ಗಮನ ಸೆಳೆಯುವಂತೆ ಮಾಡಿದ ಕೀರ್ತಿ ಎಸ್.ಎಂ.ಕೃಷ್ನ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರೂ ಆದ ಎಂ.ಸಿ.ಶಿವಾನಂದಸ್ವಾಮಿ ಮಾತನಡಿ, ಮಾಜಿ ಮುಖ್ಯಮಂತ್ರಿ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರ ದೂರದೃಷ್ಟಿಯಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲು ಸಾಧ್ಯವಾಯಿತು ಎಂದರು.
ಎಸ್.ಎಂ.ಕೃಷ್ಣ ಅವರು ಎಂದೂ ಯಾರನ್ನು ಟೀಕಿಸುವ ಪ್ರಯತ್ನ ಮಾಡಲಿಲ್ಲ. ಅವರೊಬ್ಬ ಅಪರೂಪದ ರಾಜಕಾರಣಿ. ಯಾವುದೇ ಕೆಲಸವನ್ನು ಕೈಗೆತ್ತಿಕೊಂಡರೂ ಅದನ್ನು ಪೂರ್ಣಗೊಳಿಸದೇ ವಿರಮಿಸುತ್ತಿರಲಿಲ್ಲ. ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಜಾರಿಗ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ತಾಲ್ಲೂಕು ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟಗೆರೆ ಪ್ರವೀಣ್, ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಸಿಡಿಎ ಸದಸ್ಯ ಶೃದೀಪ್, ಆಶ್ರಯ ಸಮಿತಿ ಸದಸ್ಯ ಪ್ರಸಾದ್ ಅಮಿನ್, ನಗರಸಭೆ ಸದಸ್ಯರಾದ ಪರಮೇಶ್ ರಾಜ್ ಅರಸ್, ಪ್ರಕಾಶ್ ರೈ, ಮುಖಂಡರಾದ ಜೇಮ್ಸ್ ಡಿಸೋಜಾ, ಶಿವರಾಂ, ಸಂತೋಷ್, ಶಬುದ್ದೀನ್, ಕುಸುಮಾ ಭರತ್, ಮಲ್ಲಿಕಾದೇವಿ, ಶೋಭಾ, ಪ್ರಕಾಶ್ ಸೇರಿದಂತೆ ಮತ್ತಿತರರು ಇದ್ದರು.
ಪಕ್ಷದ ಮುಖಂಡರೆಲ್ಲರೂ ಎಸ್.ಎಂ.ಕೃಷ್ಣ ಅವರ ಭಾವಚಿತ್ರಕ್ಕೆ ಸಾಮೂಹಿಕವಾಗಿ ಪುಷ್ಪ ನಮನ ಸಲ್ಲಿಸಿದರು.
S.M. Krishna’s contribution to the development of the state is immense.