ಚಿಕ್ಕಮಗಳೂರು: : ಜಿಲ್ಲೆಯಲ್ಲಿ ಸುಮಾರು ೩೮೦ ಜನ ಲಿಂಗತ್ವ ಅಲ್ಪಸಂಖ್ಯಾತರು ನೋಂದಾಯಿತರಾಗಿದ್ದು, ಇವರಲ್ಲಿ ೨೫ ಜನ ಮಾತ್ರ ಗುರುತಿನ ಚೀಟಿ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲಾ ಲಿಂಗತ್ವ ಅಲ್ಪಸಂಖ್ಯಾತರು ತಪ್ಪದೆ ಗುರುತಿನ ಚೀಟಿ ಪಡೆಯಲು ಮುಂದೆ ಬರಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಿನ್ನೆ ನಡೆದ ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಲಿಂಗತ್ವ ಅಲ್ಪಸಂಖ್ಯಾತರು ಸರ್ಕಾರದ ಯೋಜನೆಗಳನ್ನು ಪಡೆಯಲು ಕಡ್ಡಾಯವಾಗಿ ಗುರುತಿನ ಚೀಟಿ ಪಡೆದು ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದ ಅವರು ಲಿಂಗತ್ವ ಅಲ್ಪಸಂಖ್ಯಾತರಿಗೆ ವಿವಿಧ ಇಲಾಖೆಗಳಿಗೆ ನಡೆಯುವ ನೇಮಕಾತಿಗಳಲ್ಲಿ ಆದ್ಯತೆ, ವಸತಿ ಸೌಲಭ್ಯ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ ಸೇವೆಗಳನ್ನು ಪಡೆಯಲು ಆನ್ಲೈನ್ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆದು ಸೌಲಭ್ಯ ಪಡೆದುಕೊಳ್ಳಬಹುದು ಎಂದರು.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಎರಡು ಸ್ವಯಂ ಸೇವಾ ಸಂಸ್ಥೆಗಳು ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳು ಹಾಗೂ ಅವರ ದೈನಂದಿನ ಬದುಕನ್ನು ಅಧ್ಯಯನ ಮಾಡಿ ಪ್ರತಿ ಮಾಹೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ವರದಿಯನ್ನು ನೀಡಬೇಕು ಅಂತವರನ್ನು ಗುರುತಿಸಿ ಅವರಿಗೆ ಸಿಗಬೇಕಾದ ಸರ್ಕಾರಿ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ದೊರಕುವಂತೆ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಚೇತನ, ಧನಶ್ರೀ, ಹೆಚ್ ಐ ವಿ ಭಾದಿತ, ಧಮನಿತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು ನೀಡಲು ಸಮಿತಿಯು ಚೀಟಿ ಎತ್ತುವುದರ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಈ ಯೋಜನೆ ಪಡೆಯಲು ೧೮ ರಿಂದ ೬೦ ವರ್ಷದ ಒಳಗಿನ ಮಹಿಳೆಯರಿಗೆ ೧.೫೦ ಲಕ್ಷ ವಾರ್ಷಿಕ ಆದಾಯ ಇರುವ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ನಿಗಧಿಯಂತೆ ಅರ್ಜಿ ಸಲ್ಲಿಸಲಾಗಿದ್ದ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಎನ್.ಜಿ.ಒ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Beneficiary Selection Committee Meeting under the Gender Minority Rehabilitation Scheme