ಚಿಕ್ಕಮಗಳೂರು: ಭಾರತ ವಿಶ್ವದಲ್ಲೇ ಅತೀ ದೊಡ್ಡ ಹಾಗೂ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಭಾನುಮತಿ ಬಿ.ಸಿ. ಹೇಳಿದರು.
ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತವು ಆಡಳಿತಾತ್ಮಕವಾಗಿ ಭೌಗೋಳಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ವಿಶಿಷ್ಟತೆಯನ್ನು ಹೊಂದಿದ ದೇಶವಾಗಿದೆ. ಅಂಬೇಡ್ಕರ್ ನೀಡಿದ ಸಂವಿಧಾನದಿಂದಲೇ ೧೮ ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯರಿಗೂ ಮತದಾನ ಮಾಡುವ ಹಕ್ಕಿದೆ. ಅದೇ ರೀತಿ ಭಾರತೀಯ ಪ್ರಜೆಗಳು ಜವಾಬ್ದಾರಿಯಿಂದ ನಿರ್ವಹಿಸಬೇಕಾದ ಕರ್ತವ್ಯಗಳನ್ನು ತಿಳಿಸಿದೆ ಎಂದು ಹೇಳಿದರು.
ಉತ್ತಮ ರಾಜಕೀಯ ವ್ಯವಸ್ಥೆಯನ್ನು ಆಯ್ಕೆ ಮಾಡುವಲ್ಲಿ ಮತದಾನ ಪ್ರಮುಖ ಪಾತ್ರವಹಿಸುತ್ತದೆ. ಪ್ರತಿಯೊಂದು ಮತಕ್ಕೂ ಅಮೂಲ್ಯವಾದ ಮೌಲ್ಯವಿದ್ದು, ಒಂದು ಮತದಿಂದ ಸೋಲು ಗೆಲುವನ್ನು ಕಂಡಿರುವ ಉದಾಹರಣೆಗಳಿವೆ. ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ೨೦೨೫ನೇ ಮತದಾರರ ದಿನಾಚರಣೆಯನ್ನು ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಮಾತನಾಡಿ ಮತದಾನ ಎಂಬುದು ವಜ್ರಾಯುಧ ಇದ್ದಂತೆ ಮತದಾರರು ಯಾವುದೇ ಆಸೆ, ಆಮಿಷ, ಜಾತಿ, ಧರ್ಮಕ್ಕೆ ಮರುಳಾಗದೆ ಮತದಾನದ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವದ ವ್ಯವಸ್ಥೆ ಉಳಿಸಬೇಕು. ೧೮ ವರ್ಷ ತುಂಬಿದ ಎಲ್ಲಾ ಯುವಕ, ಯುವತಿಯರು ಮತದಾರರ ಪಟ್ಟಿಯಲ್ಲಿ ತಪ್ಪದೆ ತಮ್ಮ ಹೆಸರು ಸೇರಿಸಬೇಕು ಎಂದ ಅವರು. ಸಂವಿಧಾನದ ಘನತೆ ಎತ್ತಿ ಹಿಡಿಯಲು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ಮತ ಹಾಕಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ೨೦೧೧ ರಿಂದ ಆಚರಿಸಲಾಗುತ್ತಿದೆ. ಅಂದಿನ ರಾಷ್ಟ್ರಪತಿ ಪ್ರತಿಭಾ ದೇವಿ ಸಿಂಗ್ ಪಾಟೀಲ್ ಅವರು ಭಾರತದ ಚುನಾವಣಾ ಆಯೋಗದ ೬೧ನೇ ಸಂಸ್ಥಾಪನಾ ದಿನದಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿದರು ಎಂದ ಅವರು. ಮತದಾರರನ್ನು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಲ್ಲಿ ಪ್ರೇರೇಪಿಸುವ ಸಲುವಾಗಿ ಹಾಗೂ ಅವರಲ್ಲಿ ಮತದಾನದ ಮಹತ್ವದ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಜನವರಿ ೨೫ ರಂದು ಮತದಾನದ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪ್ರತಿ ಚುನಾವಣೆಯಲ್ಲೂ ಹೆಚ್ಚು ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡುತ್ತಿರುವುದನ್ನು ಕಾಣುತ್ತೇವೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿ ಕಡಿಮೆ ಮತದಾನ ಮಾಡುವುದನ್ನು ಕಾಣುತ್ತೇವೆ. ಮತದಾನದ ಮಹತ್ವದ ಕುರಿತು ಅರಿವು ಮೂಡಿಸುವ ಸಲುವಾಗಿ ಮತದಾನ ದಿನಾಚರಣೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ೧೮ ವರ್ಷ ತುಂಬಿದ ಪ್ರತಿಯೊಬ್ಬ ಯುವಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್. ಎಸ್. ಕೀರ್ತನಾ ಮತದಾರರ ಪ್ರತಿಜ್ಞಾ ವಿಧಿ ಭೋದಿಸಿದರು. ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಗಳು ಹಾಗೂ ಮತದಾರರ ನೊಂದಣಾಧಿಕಾರಿ ರಶ್ಮಿ ಎಸ್.ಆರ್. ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚಿಕ್ಕಮಗಳೂರು ತಾಲ್ಲೂಕು ತಹಸೀಲ್ದಾರ್ ಡಾ. ಸುಮಂತ್ ಎಲ್ಲರನ್ನೂ ಸ್ವಾಗತಿಸಿದರು.
ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾಧಿಕಾರಿಗಳ ಕಛೇರಿಯ ಚುನಾವಣಾ ಶಾಖೆಯ ಸಿಬ್ಬಂದಿಗಳು, ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಸಿಬ್ಬಂದಿಗಳು ಹಾಗೂ ಕಾಲೇಜುಗಳ ವಿದ್ಯಾರ್ಥಿಗಳು ಹಾಜರಿದ್ದರು.
India is the largest and best democracy in the world.