ಚಿಕ್ಕಮಗಳೂರು: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೂಗೂಡಿ ಸ್ಥಳೀಯ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆಗಳನ್ನು ಆಯೋಜಿಸಿದರೆ ಸ್ಥಳೀಯ ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿ ಉತ್ತಮ ಆಡಳಿತ ನೀಡಲು ಸಹಕಾರಿಯಾಗುತ್ತದೆ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ ಹೇಳಿದರು.
ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಇಂದು ಬೆಳವಾಡಿ, ಮಾಚೇನಹಳ್ಳಿ ಮತ್ತು ಕೆ.ಬಿ ಹಾಳ್ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸರ್ಕಾರವು ಬಡ ಹಾಗೂ ಹಿಂದುಳಿದ ವರ್ಗದವರ ಅಭಿವೃದ್ಧಿಗಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರತಿಯೊಬ್ಬ ಅಧಿಕಾರಿಗಳು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಹಾಗೂ ಸಮಸ್ಯೆಗಳನ್ನು ಹೊತ್ತು ತರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಲು ಅಗತ್ಯ ಕ್ರಮ ವಹಿಸಬೇಕು ಎಂದರು.
ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚುನಾವಣೆ ಪೂರ್ವದಲ್ಲಿ ಘೋಷಿಸಿದ ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿಯೋಜನೆ ಹಾಗೂ ಯುವನಿಧಿಯಂತಹ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮಹಿಳಾ ಸಬಲೀಕರಣದೊಂದಿಗೆ ದೀನ ದಲಿತರನ್ನು ಹಸಿವು ಮುಕ್ತರನ್ನಾಗಿ ಮಾಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಶ್ರಮಿಸುತ್ತಿದೆ. ಈ ಗ್ಯಾರಂಟಿ ಯೋಜನೆಗಳನ್ನು ದೇಶದ ವಿವಿಧ ರಾಜ್ಯಗಳಲ್ಲಿ ಅನುಕರಣೆ ಮಾಡಿ ಜನರಿಗೆ ಉತ್ತಮ ಯೋಜನೆಗಳನ್ನು ಒದಗಿಸುತ್ತಿರುವುದು ನಮ್ಮ ಹೆಮ್ಮೆ ಎಂದರು.
ಗ್ಯಾರಂಟಿ ಯೋಜನೆಗಳೊಂದಿಗೆ ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಬೆಳವಾಡಿ, ಮಾಚೇನಹಳ್ಳಿ ಮತ್ತು ಕೆ.ಬಿ ಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯ ಮಂತ್ರಿಗಳ ವಿಶೇಷ ಅನುದಾನದೊಂದಿಗೆ ಒಟ್ಟು ೩ ಕೋಟಿ ೪೦ ಲಕ್ಷ ರೂಗಳಲ್ಲಿ ರಸ್ತೆ, ಸಮುದಾಯ ಭವನ ಹಾಗೂ ದೇವಸ್ಥಾನಗಳಿಗೆ ಅನುದಾನ ನೀಡಿ ಶಂಕು ಸ್ತಾಪನೆ ನಿರ್ವಹಿಸಿ ಕಾಮಗಾರಿಗಳನ್ನು ಚಾಲನೆ ನೀಡಲಾಗಿದೆ. ಇದೇ ರೀತಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ಅನೇಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಜನ ಸಂಪರ್ಕಗಳು ಕೇವಲ ನಾಮ ಮಾತ್ರಕ್ಕೆ ಅಲ್ಲದೆ ಈ ಸಭೆಗಳಲ್ಲಿ ವಿವಿಧ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದ ಪ್ರತಿಯೊಂದು ಅಹವಾಲುಗಳನ್ನು ಅಧಿಕಾರಿಗಳು ಪರಿಶೀಲಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂಧಿಸಿ ಸಮಸ್ಯೆ ಬಗೆಹರಿಸುವುದೇ ಸಭೆಯ ಮುಖ್ಯ ಉದ್ದೇಶ ಎಂದ ಅವರುಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಕೆ.ಬಿ ಹಾಳ್ ಗ್ರಾಮಕ್ಕೆ ಪಶು ಆಸ್ಪತ್ರೆ ಅಗತ್ಯವಿದೆ ಜೊತಗೆ ಹಸು ಸಾಕಾಣಿಕೆಗೆ ಸಾಲ ಒದಗಿಸಿ ಕೊಡಬೇಕು. ಕುಡಿಯುವ ನೀರಿನ ವ್ಯವಸ್ಥೆ ಮತ್ತು ದಿನ ಪೂರ್ತಿ ವಿದ್ಯುತ್ ನೀಡಬೇಕೆಂದು ಬೆಳವಾಡಿ ಗ್ರಾಮದ ಸಗನಮ್ಮ ಮತ್ತು ಇತರರು ಶಾಸಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಚಿಕ್ಕಮಗಳೂರು ತಾಲ್ಲೂಕು ತಹಸೀಲ್ದಾರ್ ಡಾ. ಸುಮಂತ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವಿಜಯ್ ಕುಮಾರ್, ತಾಲ್ಲೂಕು ಬಗರ್ ಹುಕ್ಕುಂ ಸದಸ್ಯರಾದ ಶಂಕರ್ ನಾಯಕ್ ಹಾಗೂ ಕೆಂಗೇಗೌಡ, ಬೆಳವಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾವೇರಮ್ಮ, ಮಾಚೇನಹಳ್ಳಿ ನಸೀಮಾ ತಾಜ್ ಮತ್ತು ಕೆ.ಬಿ ಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎಂ ಛಾಯಾ ಸೇರಿದಂತೆ ಮೂರು ಗ್ರಾಮ ಪಂಚಾಯಿತಿಗಳ ಉಪಾಧ್ಯಕ್ಷರುಗಳು ಸದಸ್ಯರುಗಳು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Public relations meeting held at Belawadi Gram Panchayat level