ಚಿಕ್ಕಮಗಳೂರು: ಮಾನವ ಕಳ್ಳ ಸಾಗಾಣಿಕೆ ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ಇದಕ್ಕೆ ಸಣ್ಣ ಮಕ್ಕಳು, ಯುವತಿಯರು, ಹೆಣ್ಣು ಮಕ್ಕಳು ಬಲಿಪಶು ಆಗುತ್ತಿರುವುದು ಅತ್ಯಂತ ಕಳವಳಕಾರಿ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಚಿಕ್ಕಮಗಳೂರು ಹಾಗೂ ಪರಿವರ್ತನ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಶಿರಾಳಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ತಾಲ್ಲೂಕು ಪಂಚಾಯಿತಿ ಡಾ. ಅಂಬೇಡ್ಕರ್ ಸಭಾಂಗಣದಲ್ಲಿ ಮಾನವ ಕಳ್ಳ ಸಾಗಣಿಕೆಯ ಮಜಲುಗಳ ಅರಿವು ಕುರಿತು ಒಂದು ದಿನದ ಕಾರ್ಯಗಾರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಹೇಳಿದರು.
ವಿವಿಧ ಆಮಿಷಗಳಿಗೆ ಒಳಗಾಗಿ ಮೋಸದ ಬಲೆಗೆ ತುತ್ತಾಗಿ ಶೋಷಿತರಾಗುವುದನ್ನು ಸಮುದಾಯದ ಪ್ರತಿಯೊಬ್ಬರು ಅರಿತು ಜಾಗೃತರಾಗಬೇಕು ಸಮುದಾಯದ ಪ್ರತಿಯೊಬ್ಬರು ಅರಿತು ಜಾಗೃತರಾದಾಗ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಾಗ ಮಾತ್ರ ಮಾನವ ಕಳ್ಳ ಸಾಗಾಣಿಕೆ ತಡೆಯಲು ಸಾಧ್ಯವಾಗುತ್ತದೆ. ಅಮಾಯಕ ಹೆಣ್ಣು ಮಕ್ಕಳು ಮಾನವ ಕಳ್ಳ ಸಾಗಾಣಿಕೆದಾರರಿಗೆ ಬಲಿಯಾಗುತ್ತಿರುವ ಘಟನೆಗಳು ಅಲ್ಲಲ್ಲಿ ನಡೆಯುತ್ತಿರುವುದು ಒಂದೆಡೆಯಾದರೆ, ಸಣ್ಣ ಮಕ್ಕಳನ್ನು ಅಪಹರಿಸಿ ಭಿಕ್ಷಾಟನೆಗೆ ಹಚ್ಚುವುದು. ಮಾನವ ದೇಹದ ಅಂಗಾಂಗಳ ಮಾರಾಟದ ಪ್ರಸಂಗಗಳು ಕೇಳಿ ಬರುತ್ತವೆ ಎಂದರು.
ಪ್ರತಿಯೊಬ್ಬ ಪ್ರಜ್ಞಾವಂತ ಸಮುದಾಯ ವಿವಿಧ ಇಲಾಖೆಯ ಅಧಿಕಾರಿಗಳು, ವಿಶೇಷವಾಗಿ ಪಾಲಕರು ಬಹು ಎಚ್ಚರಿಕೆಯಿಂದ ಇದ್ದು, ಮಾನವ ಕಳ್ಳ ಸಾಗಾಣಿಕೆ ತಡೆಗೆ ಸಂಕಲ್ಪ ತೊಡಬೇಕು ಎಂದ ಅವರು ಈ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದ ಅವರು ಮಾನವ ಕಳ್ಳ ಸಾಗಾಣಿಕೆ ಕಂಡು ಬಂದಲ್ಲಿ ಜನತೆ ತಕ್ಷಣವೇ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹಾಂತೇಶ್ ಭಜಂತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮಾನವ ಕಳ್ಳ ಸಾಗಾಣಿಕೆ ಎಂಬುದು ಸಾಮಾನ್ಯ ಮಹಿಳೆಯರಿಗೆ ಸಮಾಜದಲ್ಲಿ ಸಾಮಾನ್ಯಯುತವಾಗಿ ಜೀವನ ನಡೆಸಲು ಸಮಸ್ಯೆಯಾಗುತ್ತಿದೆ. ಮಹಿಳೆಯರನ್ನು ಕಳ್ಳ ಸಾಗಾಣಿಕೆಯಿಂದ ಅವರನ್ನು ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದು, ಕೆಲವು ಮಾರಕ ಖಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ.
ಹೆಣ್ಣು ಮಕ್ಕಳ ಲೈಂಗಿಕ ಕ್ರಿಯೆಗೆ ದುರ್ಬಳಕೆ, ಅಂಗಾಂಗಗಳ ಮಾರಾಟ, ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳಿಗೆ ಮಾನವ ಕಳ್ಳಸಾಗಾಣಿಕೆ ನಡೆಯುತ್ತದೆ. ಈ ಬಗ್ಗೆ ತನಿಖೆ ಮಾಡಿ, ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದ ಅವರು ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡುವುದು ದುರದೃಷ್ಟಕರ, ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟ ಮಾಡುತ್ತಿದ್ದಾರೆ. ಅವರನ್ನು ಬಲವಂತವಾಗಿ ದುಡಿಮೆಗಳಲ್ಲಿ ದುಡಿಸಿಕೊಳ್ಳುತ್ತಿದ್ದಾರೆ.
ಅಪಾಯದ ಸ್ಥಳಗಳಲ್ಲಿ ಕೆಲಸ ಮಾಡುವಂತೆ ಬಾಲ ಕಾರ್ಮಿಕರಾಗಿ ದುಡಿಸುವಂತದ್ದು, ಭಿಕ್ಷಾಟನೆಗೆ ಮಕ್ಕಳನ್ನು ಅಥವಾ ಹಿರಿಯ ಜೀವಗಳನ್ನು ಬಳಸಿಕೊಳ್ಳುತ್ತಿದ್ದಾರೆ ಇವುಗಳನ್ನು ತಪ್ಪಿಸಿ ಅವರಿಗೆ ನೆರವು ನೀಡಿ, ಉತ್ತಮ ಸೌಲಭ್ಯವನ್ನು ಕಲ್ಪಿಸುವುದರ ಜೊತೆಗೆ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಮೈಸೂರು ಒಡನಾಡಿ ಸೇವಾ ಸಂಸ್ಥೆ ಕಾರ್ಯದರ್ಶಿ ಸ್ಟ್ಯಾನ್ಲಿ ಕೆ.ವಿ. ಪ್ರಾಸ್ತಾವಿಕ ನುಡಿಗಳನ್ನಾಡಿ ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕರು ಜಾಗೃತರಾಗಬೇಕು. ಇಂದು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮ ಆಯೋಜಿಸುವುದರ ಜೊತೆಗೆ ಕ್ರಿಯಾಯೋಜನೆಗಳನ್ನು ರೂಪಿಸಿದ್ದು, ತಂಡಗಳನ್ನು ರಚಿಸಿ ಬಾಲಕಾರ್ಮಿಕ ಪದ್ದತಿ, ಭಿಕ್ಷಾಟನೆ ಇವುಗಳನ್ನು ನಿರ್ಮೂಲನೆ ಮಾಡಲು ಪಣತೊಟ್ಟಿದೆ. ಹೆಣ್ಣು ಮಕ್ಕಳನ್ನು ಬೇರೆ ಬೇರೆ ಕೆಲಸಗಳಿಗೆ ಬಳಸಿಕೊಳ್ಳುತ್ತಿರುವುದನ್ನು ನಾವು ಪತ್ತೆ ಮಾಡಿ ಅವರಿಗೆ ನೆರವು ನೀಡಿ, ಉತ್ತಮ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದೇವೆ ಎಂದು ಹೇಳಿದರು.
ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಮಾತನಾಡಿ ಮಾನವ ಕಳ್ಳ ಸಾಗಾಣಿಕೆಯಲ್ಲಿ ತಂತ್ರಜ್ಞಾನದ ಬಳಕೆ ಉಪಯೋಗ ಮತ್ತು ದುರುಪಯೋಗ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಈ ಕುರಿತು ಜನರು ಜವಾಬ್ದಾರಿಯುತವಾಗಿ ತಡೆಗಟ್ಟುವಂತಹ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಚಿಕ್ಕಮಗಳೂರು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇಶಕ ರೇವಣ್ಣ, ಶಿರಾಳಕೊಪ್ಪ ಪರಿವರ್ತನಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ನಿರ್ದೇಶಕ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಶಂಕರಪ್ಪ ಡಿ., ಮೈಸೂರು ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಮತ್ತು ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಪರಶುರಾಮ್ ಎಂ.ಎಲ್. ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
One-day workshop on awareness of human trafficking