ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸರ್ಕಾರಿ ಜಾಗದಲ್ಲಿರುವ ಎಲ್ಲಾ ಕೆರೆಗಳ ಸರ್ವೆ ನಂ ಸಹಿತ ಸಮಗ್ರ ವರದಿಯನ್ನು ಕೂಡಲೇ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್.ಎಸ್. ಕೀರ್ತನಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಸರ್ವೆ, ಒತ್ತುವರಿ, ತೆರವು ಕುರಿತಂತೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಗೆ ಒಳಪಡುವ ಒಟ್ಟು ಕೆರೆಗಳನ್ನು ಸರ್ವೆ ಮಾಡಿಸಿ ಒತ್ತುವರಿಯಾಗಿರುವ ಕೆರೆಗಳನ್ನು ಕೂಡಲೇ ತೆರವುಗೊಳಿಸಿ ಅವುಗಳನ್ನು ಸಂರಕ್ಷಣೆ ಮಾಡಲು ಸಂಬಂಧಿಸಿದ ಇಲಾಖೆಗಳು ತಕ್ಷಣ ಕ್ರಮಕೈಗೊಳ್ಳುವುದರ ಜೊತೆಗೆ ಅವುಗಳ ಅಭಿವೃದ್ದಿಗೆ ಕ್ರಿಯಾ ಯೋಜನೆ ಸಿದ್ದಪಡಿಸಿ ಸಲ್ಲಿಸಬೇಕು ಎಂದ ಅವರು ಕೆರೆಗಳ ಸ್ಥಿತಿಗತಿಗಳು ಸೇರಿದಂತೆ ಅಲ್ಲಿನ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಎರಡು-ಮೂರು ದಿನಗಳಲ್ಲಿ ವರದಿಯನ್ನು ನೀಡಬೇಕು ಎಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ತಿಳಿಸಿದರು.
ಕೆರೆಗಳ ಅಪೆಕ್ಸ್ ಸಮಿತಿಯಲ್ಲಿರುವ ಎಲ್ಲ ಜಿಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆಗಳನ್ನು ಮಾಡಿ ಅಲ್ಲಿನ ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಬೇಕು ಎಂದ ಅವರು ಗ್ರಾಮ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ, ಅರಣ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ತಮ್ಮ ವ್ಯಾಪ್ತಿಗೆ ಬರುವ ಸುಮಾರು ೧೭೨೯ ಕೆರೆಗಳ ದಾಖಲಾತಿಗಳು ಸೇರಿದಂತೆ ಕೆರೆಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಜಾಗವನ್ನು ರಕ್ಷಿಸಲು ಮುಂದಾಗಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮಾತನಾಡಿ ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ಕೆರೆಗಳ ಅಂಕಿ-ಅಂಶಗಳು ವ್ಯತ್ಯಾಸವಾಗದಂತೆ ಪಿಆರ್ಇಡಿ ಕಂದಾಯ, ಸಣ್ಣ ನೀರಾವರಿ, ಮತ್ತಿತರ ಇಲಾಖೆಗಳು ಸೇರಿ ಸರ್ಕಾರಿ ಸರ್ವೆ ನಂಬರ್ಗಳಲ್ಲಿ ಸಾರ್ವಜನಿಕ ಉಪಯೋಗಕ್ಕೆ ಬಳಕೆಯಾಗುವ ಕೆರೆಗಳ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಿ ಸರಿಯಾದ ಅಂಕಿ-ಅಂಶಗಳನ್ನು ನೀಡಬೇಕು ಎಲ್ಲಾ ತಾಲ್ಲೂಕು ಕಾರ್ಯನಿರ್ವಾಹಣಾಧಿಕಾರಿಗಳು, ತಹಸೀಲ್ದಾರರುಗಳು ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ, ಉಪವಿಭಾಗಾಧಿಕಾರಿಗಳಾದ ಕಾಂತರಾಜ್, ರಶ್ಮಿ, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು, ಜಿ.ಪಂ. ಉಪಕಾರ್ಯದರ್ಶಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Instructions to submit a comprehensive report on government lakes in the district