ಚಿಕ್ಕಮಗಳೂರು: ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಮಾ. 1ರಿಂದ 20ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೆಲಸಕ್ಕೆ ಹಾಜರಾಗುವ ಅಧಿಕಾರಿಗಳು ಕಟ್ಟುನಿಟ್ಟಿನಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ದತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಒಟ್ಟು 9,137 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಯಾವುದೇ ಲೋಪದೋಷ ಸಂಭವಿಸದಂತೆ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆ ರೂಪಿಸಿರುವ ಪರೀಕ್ಷಾ ಮಾರ್ಗದರ್ಶಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪರೀಕ್ಷಾ ಕಾರ್ಯನಿರ್ವಹಿಸುವಲ್ಲಿ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಬೇಡ. ಪರೀಕ್ಷೆಗಳು ಸುಸೂತ್ರವಾಗಿ ನಡೆಯಬೇಕು. ನಿಯಮಗಳು ಸರಿಯಾದ ರೀತಿಯಲ್ಲಿ ಪಾಲನೆ ಮಾಡದಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಆಯಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಫೋನ್ ಹಾಗೂ ಎಲೆಕ್ಟ್ರಿಕಲ್ ವಸ್ತುಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ ಎಂದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಹ ಮೊಬೈಲ್ ಫೋನ್ ಬಳಸುವಂತಿಲ್ಲ. ಪರೀಕ್ಷಾ ಕೇಂದ್ರದ ಒಳಗೆ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಿಸಲು ಅವಕಾಶವಿದೆ. ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಕೊಂಡೊಯ್ಯಲು ತಹಶೀಲ್ದಾರ್, ಬಿಇಒ ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಪರೀಕ್ಷಾ ಕೇಂದ್ರದ ಸಂಕೇತಗಳನ್ನು ಸರಿಯಾಗಿ ಪರಿಶೀಲಿಸಿ ಜಿಪಿಎಸ್ ಆಳವಡಿಸಿದ ವಾಹನದಲ್ಲಿ ನಿಗದಿತ ಮಾರ್ಗ ಹಾಗೂ ಸಮಯಾನುಸಾರ ಪೊಲೀಸ್ ರಕ್ಷಣೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ತಲುಪಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಸಿಸಿಟಿವಿ ಕ್ಯಾಮೆರೆ ಕಣ್ಗಾವಲಿನಲ್ಲಿ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಪಡೆದು ಸರಿಯಾದ ಸಮಯಕ್ಕೆ ಪರೀಕ್ಷಾ ಮೇಲ್ವಿಚಾರಕರಿಗೆ ತಲುಪಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರ್ ಕೊರವರ, ಜಿಲ್ಲಾ ಖಜಾನಾಧಿಕಾರಿ ಓಂಕಾರಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯ್ಕ, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ಬಿಇಒಗಳು ಹಾಗೂ ಉಪನ್ಯಾಸಕರು ಹಾಜರಿದ್ದರು.
A total of 9137 students appeared for the second PUC annual examination in the district.