ಚಿಕ್ಕಮಗಳೂರು ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಮತ್ತು ಗಾಯತ್ರಿ ಶಾಂತೇಗೌಡರ ನಡುವಿನ ಚುನಾವಣಾ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಹಿಂದಿನ ಆದೇಶದಂತೆ ಕ್ಯಾಮೆರಾ ಕಣ್ಣಾವಲಿನಲ್ಲಿ ನಡೆದ ಮತ ಮರುಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ನ್ಯಾಯಾಲಯಕ್ಕೆ ಸಲ್ಲಿಸಿದರು.
ಈ ವೇಳೆ ಸುಪ್ರೀಂಕೋರ್ಟ್, ಪ್ರಕರಣದಲ್ಲಿ ಪುರಸಭೆ, ಪಟ್ಟಣ ಪಂಚಾಯಿತಿಯ 12 ಮಂದಿ ನಾಮನಿರ್ದೇಶನ ಸದಸ್ಯರು ಮತಗಳನ್ನು ಪರಿಗಣಿಸುವ ಬಗ್ಗೆ ಆಯೋಗದಿಂದ ಮಾಹಿತಿ ಕೇಳಿತು. ಬಳಿಕ ಕೇಂದ್ರ ಸರ್ಕಾರ ಮತ್ತು ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದು, ಮಾರ್ಚ್ 25ರಂದು ವಿಚಾರಣೆ ಮುಂದೂವರಿಸುವುದಾಗಿ ಪೀಠ ಹೇಳಿದೆ.
2021ರ ಡಿಸೆಂಬರ್ 10ರಂದು ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ಗೆ ಚುನಾವಣೆ ನಡೆದಿತ್ತು. ಆರು ಮತಗಳಿಂದ ಬಿಜೆಪಿ. ಅಭ್ಯರ್ಥಿ ಎಂ.ಕೆ ಪ್ರಾಣೇಶ್ ಗೆಲುವು ಸಾಧಿಸಿದ್ದರು. ಮತ ಎಣಿಕೆ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಮರು ಮತ ಎಣಿಕೆಗೆ ಮನವಿ ಸಲ್ಲಿಸಿದ್ದರು. ಆದರೆ, ಮರು ಮತ ಎಣಿಕೆಗೆ ಅವಕಾಶ ನೀಡದೆ ಫಲಿತಾಂಶ ಘೋಷಣೆ ಮಾಡಲಾಗಿತ್ತು ಈ ಹಿನ್ನೆಲೆಯಲ್ಲಿ ಗಾಯತ್ರಿ ಶಾಂತೇಗೌಡ ಚುನಾವಣಾ ಫಲಿತಾಂಶವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನಾಮನಿರ್ದೇಶನ ಸದಸ್ಯರ ಮತಗಳನ್ನು ಹೊರತುಪಡಿಸಿ ಮರು ಮತ ಎಣಿಕೆ ನಡೆಸುವಂತೆ ಆದೇಶ ನೀಡಿತ್ತು. ಮಾರ್ಚ್ 4ರ ಒಳಗೆ ಮರು ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಅಂತೆಯೇ ಇಂದು ಮತ ಎಣಿಕೆ ನಡೆಸಿದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿದೆ.
M.K. Pranesh-Gayatri Shantegowda’s election petition postponed