ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿ ಜನರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕೂಡಲೇ ಕ್ರಮ ಕೈಗೊಳ್ಳುವಂತೆೆಅರಣ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದ್ದಾರೆ.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, “ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಜನ ಜೀವ ಭಯದಲ್ಲಿಯೇ ಓಡಾಡುವಂತಾಗಿದೆ. ಸಣ್ಣ ಬೆಳೆಗಾರರು ಬೆಳೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಕಾಡಾನೆಗಳನ್ನು ಓಡಿಸಲು ಅಥವಾ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು,” ಎಂದು ಸಭೆಯಲ್ಲಿ ಹಾಜರಿದ್ದ ಕೊಪ್ಪ ಡಿಎಫ್ ಓ ಶಿವಶಂಕರ್ ಅವರಿಗೆ ಸೂಚನೆ ನೀಡಿದರು.
ಇದಕ್ಕೂ ಮುನ್ನ ಆನೆಗಳ ಹಾವಳಿ ಬಗ್ಗೆ ಪ್ರಸ್ತಾಪಿಸಿದ ಕ್ರೆಡಲ್ ಅಧ್ಯಕ್ಷೂ ಆಗಿರುವ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಶೃಂಗೇರಿ, ಬಾಳೆಹೊನ್ನೂರು ಭಾಗದಲ್ಲಿ ಐದು ಆನೆಗಳು ನಿರಂತರವಾಗಿ ಬೆಳೆ ನಾಶ ಮಾಡುತ್ತಿದ್ದವು. ಜತೆಗೆ ಈಗಾಗಲೇ ಕಾಡಾನೆ ದಾಳಿಗೆ ನಾಲ್ವರು ಬಲಿಯಾಗಿದ್ದಾರೆ. ಪ್ರಸ್ತುತ ಎರಡು ಆನೆಗಳನ್ನು ಸೆರೆಹಿಡಿಯಲಾಗಿದ್ದು, ಇನ್ನೂ ಮೂರು ಆನೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಹೀಗಾಗಿ ಉಳಿದಿರುವ ಆನೆಗಳನ್ನು ಸೆರೆ ಹಿಡಿಯಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ದನಿಗೂಡಿಸಿದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಕಾಡಾನೆ ದಾಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಪ್ರಾಣ ಹಾನಿ ಪ್ರಕರಣಗಳು ಹೆಚ್ಚಾಗಲಿವೆ ಎಂದರು.
ಮೂಡಿಗೆರೆ ಶಾಸಕಿ ನಯನಾ ಮೊಟಮ್ಮ ಮಾತನಾಡಿ, ಭದ್ರ ಅಭಯಾರಣ್ಯ ವ್ಯಾಪ್ತಿಯ 200 ಹೆಕ್ಟರ್ ಪ್ರದೇಶದಲ್ಲಿ ಭದ್ರಾ ಸಾಫ್ಟ್ ರಿಲೀಸ್ ಕೇಂದ್ರ ಆರಂಭಿಸಿದಲ್ಲಿ ಪುಂಡಾಟ ನಡೆಸುವ ಆನೆಗಳನ್ನು ಅಲ್ಲಿಗೆ ಸ್ಥಳಾಂತರಿಸಬಹುದಾಗಿದೆ. ಶೃಂಗೇರಿ ಅಥವಾ ಮೂಡಿಗೆರೆ ಭಾಗದಲ್ಲಿ ಆನೆ ಕ್ಯಾಂಪ್ ಆರಂಭಿಸಿದಾಗ ಮಾತ್ರ ಸ್ಥಳೀಯವಾಗಿ ಪುಂಡಾಟ ನಡೆಸುವ ಆನೆಗಳನ್ನು ಶೀಘ್ರವೇ ಸೆರೆ ಹಿಡಿದು ಸಾಫ್ಟ್ ರಿಲೀಸ್ ಕೇಂದ್ರಕ್ಕೆ ಬಿಡಲು ಸಹಾಯಕವಾಗಲಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಸೂಚನೆ ನೀಡಬೇಕು ಎಂದು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಭದ್ರಾ ಹುಲಿ ಯೋಜನೆಯ ನಿರ್ದೇಶಕ ಪುಲ್ಕೆತ್ ಮೀಣಾ , ಭದ್ರಾ ಹುಲಿ ಸಂರಕ್ಷಿತ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆಗಳ ಸಾಫ್ಟ್ ರಿಲೀಸ್ ಕೇಂದ್ರ ಆರಂಭಕ್ಕೆ ಭೂಮಿ ನೀಡಲು ಕೇಂದ್ರ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದಾಗ, ಈ ಕುರಿತು ಕೇಂದ್ರ ಅರಣ್ಯ ಸಚಿವರೊಂದಿಗೆ ಮಾತನಾಡುವುದಾಗಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಹಾಗೂ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳಲ್ಲಿ ಲೋಪವಾಗಿರುವ ಕುರಿತು ಸಭೆಯಲ್ಲಿ ಸಿ.ಟಿ.ರವಿ ಹಾಗೂ ಎಚ್.ಡಿ.ತಮ್ಮಯ್ಯ ಅವರು ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್ ಅವರು, “ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಸಮಗ್ರ ವರದಿ ತರಿಸಿಕೊಳ್ಳಲಾಗುವುದು. ನೀರಿನ ಮೂಲ ಗುರುತಿಸುವ ಮುನ್ನ ಕಾಮಗಾರಿ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಅನುಪಾಲನಾ ವರದಿ ಕುರಿತಂತೆ ಚರ್ಚಿಸಲಾಯಿತು. ಜಲ ಜೀವನ್ ಮಿಷನ್, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಾಲೋಚನೆ ನಡೆಸಿ, ಸರ್ಕಾರದ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಚಿವ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಉಪಸ್ಥಿತರಿದ್ದರು.
Zilla Panchayat Quarterly Progress Review Meeting