ಚಿಕ್ಕಮಗಳೂರು: ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಮೇ ೧೬ ರಂದು ಸಂಜೆ ೪ ರಿಂದ ೬ ಗಂಟೆಯವರೆಗೆ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಾಕ್ಡ್ರಿಲ್ (ಆಪರೇಷನ್ ಅಭ್ಯಾಸ್) ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್.ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಿವಿಲ್ ಡಿಫೆನ್ಸ್ ಮಾಕ್ಡ್ರಿಲ್ (ಅಣಕು ಪ್ರದರ್ಶನ) ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇ ೧೬ ರಂದು ಸಿವಿಲ್ ಡಿಫೆನ್ಸ್ ಮಾಕ್ಡ್ರಿಲ್ ಅನ್ನು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಮಾಕ್ಡ್ರಿಲ್ಗೆ ಅಗತ್ಯವಾದ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಮಾಕ್ಡ್ರಿಲ್ ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು. ಇದಕ್ಕೆ ಅಗತ್ಯವಾದ ಮಾನವ ಸಂಪನ್ಮೂಲವನ್ನು ವ್ಯವಸ್ಥೆ ಮಾಡಬೇಕು. ಅಗತ್ಯ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳುವಂತೆ ಹೇಳಿದರು.
ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಾಕ್ಡ್ರಿಲ್ ಮಾಡಲು ಸೂಕ್ತವಾದ ಸ್ಥಳವನ್ನು ಗುರುತಿಸಿಕೊಳ್ಳುವಂತೆ ತಿಳಿಸಿದ ಅವರು, ಎಲ್ಲಾ ರೀತಿಯ ವ್ಯವಸ್ಥೆ, ಕಂಟ್ರೋಲ್ ರೂಂ, ಅಗ್ನಿಶಾಮಕ ವ್ಯವಸ್ಥೆ, ಅಂಬ್ಯುಲೆನ್ಸ್ ವ್ಯವಸ್ಥೆ, ಆಸ್ಪತ್ರೆ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಮಾಕ್ಡ್ರಿಲ್ ಅನ್ನು ವ್ಯವಸ್ಥಿತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆತ್ಮರಕ್ಷಣೆಯ ಹಿತದೃಷ್ಟಿಯಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿ.ಪಂ.ನ ಉಪ ಕಾರ್ಯದರ್ಶಿ ಶಂಕರ್ ಕೊರವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮೋಹನ್ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀಧರ್, ಡಿವೈಎಸ್ಪಿ ಶೈಲೇಂದ್ರ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತಾಧಿಕಾರಿ ಹೆಚ್.ಎಸ್.ಪರಮೇಶ್ ಮುಂತಾದವರು ಉಪಸ್ಥಿತರಿದ್ದರು.
Mock drill at Chikmagalur Institute of Medical Sciences today